ಕನ್ನಡ ನಾಡು ನುಡಿ ಪರವಾಗಿ ಹೋರಾಟ ಮಾಡುತ್ತಿರುವ ಕರವೇ ಅಧ್ಯಕ್ಷ ನಾರಾಯಣ ಗೌಡರ ಬಂಧನ ಸರಿಯಲ್ಲ ಎಂದು ಬಿವೈ ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಡು ನುಡಿ, ನೆಲ ಜಲದ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಕಾಂಗ್ರೆಸ್ ಸರ್ಕಾರ ಮೊಸಳೆ ಕಣ್ಣೀರು ಸುರಿಸುತ್ತಿದೆ. ಕಳೆದ ಆರು ತಿಂಗಳಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿದು ಹೋಗುತ್ತಿದ್ದು, ಈ ಬಗ್ಗೆ ದೃಢ ನಿಲುವು ತಳೆಯಲು ಸಾಧ್ಯವಾಗಿಲ್ಲ ಎಂದು ತಿರುಗೇಟು ನೀಡಿದರು.
ನಾಡು ನುಡಿಗೆ ಹೋರಾಟ ಮಾಡುತ್ತಿರುವ ಕರವೇ ಅಧ್ಯಕ್ಷ ನಾರಾಯಣಗೌಡ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂದು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರದಲ್ಲಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಪಷ್ಟ ಅಭಿಪ್ರಾಯ ತಿಳಿಸಲಿ ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.