ವಿಜಯಪುರ: ವಿಜಯಪುರದಲ್ಲೂ ವಿಶೇಷ ಸಚಿವ ಸಂಪುಟ ಸಭೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಜಿಲ್ಲೆಗೆ ಹಲವು ಯೋಜನೆ ಜಾರಿಗೆ ತರುತ್ತೇವೆ. ನೀರಾವರಿ ಸಚಿವನಾದ ಮೇಲೆ ಇಂಡಿಗೆ ಕೊಟ್ಟಷ್ಟು ಅನುದಾನವನ್ನು ರಾಜ್ಯದ ಬೇರಾವ ಕ್ಷೇತ್ರಕ್ಕೂ ನೀಡಿಲ್ಲ, ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ. 3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ. 2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಬೇಕು, ಜಿಲ್ಲೆಯ ಎಲ್ಲ ಎಂಟು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಬೇಕು ಎಂದರು.
ನಿಮ್ಮ ಶಾಸಕರು ನನಗೆ ಏನೂ ಬೇಡ, ನಮ್ಮ ಭಾಗದ ರೈತರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ಹೀಗಾಗಿ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ, ತಿಡಗುಂದಿ ಶಾಖಾ ಕಾಲುವೆ ಹಾಗೂ ಇಂಡಿ ತಾಲ್ಲೂಕಿನ 90 ಕೆರೆಗಳನ್ನು ಭರ್ತಿಗೊಳಿಸುವ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ವಿವಿಧ ಇಲಾಖೆಗಳಿಂದ ಒಟ್ಟಾರೆ ರೂ. 4,555 ಕೋಟಿ ಮೊತ್ತದ ಕಾಮಗಾರಿಗಳಿಗೆ ಭೂಮಿ ಪೂಜೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ನಿಂಬೆಗಿಂತ ಶ್ರೇಷ್ಠ ಹುಳಿ ಮತ್ತೊಂದಿಲ್ಲ, ದುಂಬಿಗಿಂತ ಶ್ರೇಷ್ಠವಾದ ಕಪ್ಪು ಮತ್ತೊಂದಿಲ್ಲ, ಶಂಭುಗಿಂತ ದೊಡ್ಡ ದೇವರಿಲ್ಲ, ನಂಬಿಕೆಗಿಂತ ದೊಡ್ಡ ಗುಣ ಬೇರೊಂದಿಲ್ಲ ಎಂದು ಸರ್ವಜ್ಞನ ವಚನವನ್ನು ನೆನಪಿಸಿಕೊಂಡರು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಅವರು ಈ ಭಾಗದಲ್ಲಿ ಹೆಚ್ಚು ಕೈಗಾರಿಕೆ ತರಬೇಕು ಎಂದು ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಈ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ತಿಳಿಸಿದರು.
ಇಂಡಿ ತಾಲ್ಲೂಕಿನ ಮತದಾರರು ಮೂರು ಬಾರಿ ಯಶವಂತ ಪಾಟೀಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ನಿಮ್ಮ ನಂಬಿಕೆಗೆ ಪ್ರತಿಯಾಗಿ ನಮ್ಮ ಇಡೀ ಸರ್ಕಾರ ಸಾವಿರಾರು ಕೋಟಿ ಮೊತ್ತದ ಯೋಜನೆಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸುತ್ತಿದ್ದೇವೆ. ಇದೇ ನಮ್ಮ ಭಾಗ್ಯ ಎಂದು ತಿಳಿಸಿದರು.