ಬೆಂಗಳೂರು: ನಾಳೆ ಗುರುವಾರ ಐತಿಹಾಸಿಕ ನಂದಿ ಬೆಟ್ಟದಲ್ಲಿ ಆಯೋಜಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನು ದಿಢೀರ್ ರದ್ದು ಮಾಡಲಾಗಿದೆ. ನಾಳೆ ಎಂದಿನಂತೆ ಸಚಿವ ಸಂಪುಟ ಸಭೆ ಬೆಂಗಳೂರಿನ ವಿಧಾನಸೌಧದಲ್ಲೇ ನಡೆಯಲಿದೆ.
ಸಚಿವ ಸಂಪುಟ ಸಭೆ ಸ್ಥಳಾಂತರ ಕುರಿತು ರಾಜ್ಯ ಸರಕಾರ ಇಂದು ಅಧಿಕೃತ ಪ್ರಕಟಣೆ ಹೊರಡಿಸಿದೆ. ಆದರೆ ಸ್ಥಳಾಂತರಕ್ಕೆ ಯಾವುದೇ ಕಾರಣ ನೀಡಿಲ್ಲ.
ನಾಳೆ ಮಧ್ಯಾಹ್ನ ಒಂದು ಗಂಟೆಗೆ ನಂದಿ ಗಿರಿಧಾಮದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಅಲ್ಲದೆ ಇಂದಿನಿಂದ ಎರಡು ದಿನಗಳ ಕಾಲ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ಸಹ ವಿಧಿಸಿತ್ತು.
ಕಲಬುರಗಿ ಮತ್ತು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗಳಿಗಿಂತ ಉತ್ತಮವಾಗಿ ನಂದಿ ಗಿರಿದಾಮದಲ್ಲಿ ನಡೆಸಲು ಅಧಿಕಾರಿಗಳು ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಅಭಿವೃದ್ಧಿಗೆ ಅನುದಾನ ಹಂಚಿಕೆಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಮುಂದೆ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.