ಬೆಂಗಳೂರು, ಆ.27 : ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆರೋಗ್ಯ ಸಚಿವ ಯು.ಟಿ. ಖಾದರ್ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತು ಸಂಪುಟ ಉಪ ಸಮಿತಿ ರಚಿಸಿದೆ.
ಲೋಕಸಭೆ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಅವರು ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ‘ಛಾತ್ರೋಂ ಕಿ ಗೂಂಜ್ ಎಂಬ ಚಳವಳಿಯನ್ನು ಆರಂಭಿಸಿ ದೇಶದ ವಿದ್ಯಾರ್ಥಿಗಳನ್ನು ಸಂಘಟಿಸಿ ಅವರ ಜೊತೆ ಸಂವಾದ ಆಲಿಸುತ್ತಿದ್ದಾರೆ. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿಯನ್ನು ರಚಿಸಿದೆ.
ಸಂಪುಟ ಉಪ ಸಮಿತಿ ರಚನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮತಿ ನೀಡಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಆಕಾಂಕ್ಷೆಗಳು ಮತ್ತು ಅಭಿಪ್ರಾಯಗಳನ್ನು ಆಲಿಸಿ, ವಿದ್ಯಾರ್ಥಿಗಳು ಹಾಗೂ ಯುವಜನರು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಒದಗಿಸುವಂತಹ ಶಿಕ್ಷಣ ಸುಧಾರಣೆಗಳನ್ನು ಶಿಫಾರಸು ಮಾಡುವಂತೆ ಸಮಿತಿಗೆ ಅವರು ಸೂಚಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆಗಟ್ಟಲು ಕಠಿಣ ನಿಯಮ ರೂಪಿಸುವುದು. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಅನುಸರಿಸಬೇಕಾದ ನಿಯಮಗಳು. ಶಿಕ್ಷಣಕ್ಕೆ ತಗಲುವ ವೆಚ್ಚ, ಕೋಚಿಂಗ್ಗೆ ಶುಲ್ಕ ನಿಗದಿಪಡಿಸುವಂತೆಯೂ ಕೂಡ ಸಮಿತಿಗೆ ತಿಳಿಸಲಾಗಿದೆ.
ಖಾಸಗಿ ಕೋಚಿಂಗ್ ಸೆಂಟರ್ಗಳಲ್ಲಿ ಪಡೆಯುವ ಶುಲ್ಕವನ್ನು ನಿಯಂತ್ರಿಸಲು ಅಗತ್ಯವಾದ ಕಾನೂನು ರೂಪಿಸುವಂತೆ ಸಮಿತಿಗೆ ಸಿಎಂ ಸೂಚಿಸಿದ್ದಾರೆ. ರಾಜ್ಯದ ಭವಿಷ್ಯ ಯುವಜನರ ಮೇಲೆ ನಿಂತಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ, ಅಗತ್ಯ ಮೂಲಸೌಕರ್ಯ ಹಾಗೂ ಸಮರ್ಪಕ ಅವಕಾಶಗಳನ್ನು ಒದಗಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಮತ್ತು ರಾಜ್ಯದ ಯುವಜನರ ಸಮಸ್ಯೆಗಳು ಹಾಗೂ ಭಾವನೆಗಳನ್ನು ಅರ್ಥಮಾಡಿಕೊಂಡು, ಅವರ ಆಕಾಂಕ್ಷೆಗಳಿಗೆ ಸ್ಪಂದಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರಿಂದ ಬರುವ ಸಲಹೆ-ಸೂಚನೆಗಳನ್ನು ಮುಕ್ತವಾಗಿ ಸ್ವೀಕರಿಸಲಾಗುವುದು. ಎಲ್ಲರೂ ಒಟ್ಟಾಗಿ ಯುವಜನರಿಗೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಸಂಪುಟ ಉಪ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ : ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ರಚಿಸಿರುವ ಈ ಸಂಪುಟ ಉಪಸಮಿತಿಯಲ್ಲಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಸಚಿವರಾದ ಬಸವರಾಜ ರಾಯರೆಡ್ಡಿ, ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ಅವರು ಸದಸ್ಯರಾಗಿದ್ದಾರೆ.
ಪರಿಶೀಲನೆ ಹಂತದಲ್ಲಿರುವ ರಾಜ್ಯ ಶಿಕ್ಷಣ ನೀತಿ-2023 : ಪ್ರೊ. ಸುಖದೇವ್ ಥೋರಟ್ ಅವರ ಅಧ್ಯಕ್ಷತೆಯ ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಆಯೋಗವು ತನ್ನ ಅಂತಿಮ ವರದಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿದೆ. ವರದಿ ಸಚಿವ ಸಂಪುಟದ ಪರಿಶೀಲನೆ ಹಾಗೂ ಸಂಪುಟ ಉಪ ಸಮಿತಿಯ ರಚನೆ ಮತ್ತು ವರದಿಯ ಶಿಫಾರಸುಗಳ ಅನುಷ್ಠಾನದ ಹಂತದಲ್ಲಿದೆ. ಈ ನಡುವೆ ಸರ್ಕಾರ ನೇಮಿಸಿರುವ ಸಂಪುಟ ಉಪ ಸಮಿತಿಯು ನೀಡುವ ಶಿಫಾರಸ್ಸನ್ನು ಕೂಡ ರಾಜ್ಯ ಶಿಕ್ಷಣ ನೀತಿಯಲ್ಲಿ ಅಳವಡಿಸಲುನ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

