ಚನ್ನಪಟ್ಟಣ: ನ.11ರಂದು ಸಂಜೆ 5.30 ಬಹಿರಂಗ ಪ್ರಚಾರ ಅಂತ್ಯ; ಜಿಲ್ಲಾಧಿಕಾರಿ ಘೋಷಣೆ

Most read

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನ.13ರಂದು ಮತದಾನ ನಡೆಯಲಿದ್ದು, ನ.11ರಂದು ಬಹಿರಂಗ ಪ್ರಚಾರಕ್ಕೆ ತೆರ ಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಕ್ಷೇತ್ರದ ಮತದಾರರಲ್ಲದವರು ನ.11ರ ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟು ಹೊರಹೋಗಬೇಕು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವಂತಿಲ್ಲ. ಅದೇ ವೇಳೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ ಎಂದು ತಿಳಿಸಿದರು.

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹೋಟೆಲ್, ರೆಸಾಟ್ಸ್, ಹೋಂ ಸ್ಟೇ, ಕಲ್ಯಾಣ ಮಂಟಪಗಳ ಮಾಲೀಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಕ್ಷೇತ್ರದ ಮತದಾರರಲ್ಲದವರು ಅಥವಾ ಕ್ಷೇತ್ರದ ಚುನಾವಣಾ ಗುರುತಿನ ಚೀಟಿ ಇಲ್ಲದವರಿಗೆ ವಾಸ್ತವ್ಯಕ್ಕೆ ಅವಕಾಶ ನೀಡುವಂತಿಲ್ಲ ಎಂದು ತಿಳಿಸಿದರು. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ. ಮಾದರಿ ನೀತಿ ಸಂಹಿತೆಯನ್ನು, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 16 ಎಸ್‌ಎಸ್ಎಟಿ ತಂಡ ಮತ್ತು ಒಂಬತ್ತು ಎಫ್‌ಎಸ್‌ಟಿ ತಂಡಗಳನ್ನು ನಿಯೋಜಿಸಲಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್‌ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 119 ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಅವರು ಚುನಾವಣಾ ವೀಕ್ಷಕರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಾರೆ ಎಂದು ತಿಳಿಸಿದರು.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವ್ಯಕ್ತಿಯೊಬ್ಬರು ಗರಿಷ್ಠ 50 ಸಾವಿರ ನಗದು ಸಾಗಿಸಬಹುದಾಗಿದೆ. ಅದಕ್ಕೂ ಹೆಚ್ಚಿನ ಹಣವನ್ನು ಕೊಂಡೊಯ್ಯಬೇಕಾದರೆ ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು ಎಂದರು.

ಸೂಕ್ತ ಬಂದೋಬಸ್ತ್: ಈಗಾಗಲೇ 8 ಪ್ಯಾರಾ ಮಿಲಿಟರಿ ತಂಡ ರಾಮನಗರ ಜಿಲ್ಲೆಗೆ ಆಗಮಿಸಿದೆ. ಅದರಲ್ಲಿ ಏಳು ಪ್ಯಾರಾ ಮಿಲಿಟರಿ ಪಡೆಯನ್ನು 197 ಮತಗಟ್ಟೆಗಳ ಬಂದೋಬ್‌ಗೆ ನಿಯೋಜಿಸಲಾಗಿದೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.119 ಸೂಕ್ಷ್ಮ ಮತಗಟ್ಟೆ ಸ್ಥಾಪಿಸಲಾಗಿದೆ. ಅದರಲ್ಲಿ ಒಬ್ಬರು ಪೊಲೀಸ್ ಹಾಗೂ ಒಬ್ಬರು ಗೃಹ ರಕ್ಷಕ ಸಿಬ್ಬಂದಿ ಇರುತ್ತಾರೆ ಎಂದರು.

ಇದುವರೆಗೂ ಮಾದರಿ ಈತಿ ಸಂಹಿತೆ ಉಲ್ಲಂಘನೆಯ 14 ಪ್ರಕರಣಗಳನ್ನು ದಾಖಲಿಸಲಾಗಿದೆ. ಪೊಲೀಸ್ ಇಲಾಖೆ ವ್ಯಾಪ್ತಿಗೆ ಒಳಪಡುವ ಒಂಬತ್ತು ಅಬಕಾರಿ ಪ್ರಕರಣಗಳು ಸೇರಿವೆ.  676 ಸೀರೆ ಜಪ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವ್ಯವಸ್ಥಾಪಕ ಹಾಗೂ ಮತ್ತೊಬ್ಬರ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.

ನಿಷೇದಾಜ್ಞೆ ಜಾರಿ:

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನ.12ರ ಮಂಗಳವಾರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯ ವರೆಗೆ ವಿವಿಧ ಷರತ್ತುಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ನ.11ರ ಸೋಮವಾರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಹಂಚಿಕೆ ಸಾಗಾಣಿಕೆ ನಿಷೇಧಿಸಿ ಶುಷ್ಕ ದಿನ ಎಂದು ಘೋಷಿಸಿ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಎಂದು ಅವರು ತಿಳಿಸಿದರು.

More articles

Latest article