ಬೆಂಗಳೂರು: ಯಾವುದೇ ಉಪ ಚುನಾವಣೆ ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆ ಎನ್ನುವುದು ನಿಸ್ಸಂಶಯ. ಫಲಿತಾಂಶ ತಮ್ಮ ಪರವಾಗಿದೆ ಎನ್ನುವುದು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಕ್ಕೆ ಮುಖ್ಯವಾಗುತ್ತದೆ. ರಾಜ್ಯದಲ್ಲಿ ಉಪ ಚುನಾವನೆ ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರವಂತೂ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟಿದೆ.
ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದ್ದು, ಮೂರೂ ಪಕ್ಷಗಳ ಅಭ್ಯರ್ಥಿಗಳು ಮತ್ತು ಸ್ಥಳೀಯ ಮುಖಂಡರು ಮನೆ ಮನೆ ಪ್ರಚಾರದಲ್ಲಿ ತೊಡಗಿದ್ದಾರೆ. ನಾಳೆ, ಬುಧವಾರ ಮತದಾನ ನಡೆಯಲಿದ್ದು, ನ. 23 ರಂದು ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿ.ಎಸ್.ಯಡಿಯೂರಪ್ಪ ಇಡೀ ಸಚಿವ ಸಂಪುಟದ ಸದಸ್ಯರು ಪ್ರಚಾರದಲ್ಲಿ ಭಾಗಿಯಾಗಿದ್ದರು.
ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿ. ಪಿ. ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ. ಶಿಗ್ಗಾಂವಿಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನಿಂದ ಪಠಾಣ್ ಯಾಸೀರ್ ಅಹ್ಮದ್‌ಖಾನ್ ಸೇರಿದಂತೆ 8 ಅಭ್ಯರ್ಥಿಗಳಿದ್ದಾರೆ. ಸಂಡೂರಲ್ಲಿ ಕಾಂಗ್ರೆಸ್ನ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸೇರಿ 6 ಹುರಿಯಾಳುಗಳು ಕಣದಲ್ಲಿದ್ದಾರೆ.
ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಇನ್ನಿಲ್ಲದ ಕಸರತ್ತುಗಳಲ್ಲಿ ತೊಡಗಿಸಿಕೊಂಡಿದ್ದಾರೆ.