ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಚಾರವನ್ನು ತಮ್ಮ ಸರ್ಕಾರ ಸಹಿಸುವುದಿಲ್ಲ. ಮರಣೋತ್ತರ ಪರೀಕ್ಷೆ ಮತ್ತಿತರ ಪ್ರಕ್ರಿಯೆಗಳಿಗೆ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ಳಂದೂರು ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಪೇದೆಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ಪೊಲೀಸ್ ಇಲಾಖೆ ಮಾತ್ರವಲ್ಲದೆ ಸರ್ಕಾರದ ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಕಂಡು ಬಂದರೆ ಸರಕಾರ ಸಹಿಸುವುದಿಲ್ಲ. ಅಂಹವರ ಕಠಿಣಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮುಖ್ಯವಾಗಿ ಪೊಲೀಸ್ ಇಲಾಖೆಯಲ್ಲಿ ಒಂದು ಸಾವಿರ ಇರಲಿ, ಐದುನೂರು ರೂ. ಇರಲಿ. ಲಂಚ ಲಂಚವೇ. ಲಂಚ ಪಡೆದ ಅಧಿಕಾರಿ ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಿ ಇಲಾಖಾ ವಿಚಾರಣೆ ನಡೆಸಲಾಗುತ್ತದೆ. ತನಿಖೆಯಲ್ಲಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುತ್ತದೆ ಎಂದು ಹೇಳಿದರು.
ಲಂಚ ಪಡೆಯುವ ಪ್ರಕರಣಗಳು ನಮಗೆ ಅಥವಾ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದರೆ ತಕ್ಷಣವೇ ನಿರ್ಧಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿಯವರೂ ಸ್ಪಷ್ಟ ಆದೇಶ ನೀಡಿದ್ದಾರೆ. ನಮ್ಮ ಸರ್ಕಾರ ಭ್ರಷ್ಟಚಾರವನ್ನು ಯಾವುದೇ ಹಂತದಲ್ಲೂ ಬೆಂಬಲಿಸುವುದಿಲ್ಲ ಎಂದು ಹೇಳಿದರು.
ಒಳ ಮೀಸಲಾತಿ ವಿಚಾರವಾಗಿ ಹಿಂದಿನ ಬಿಜೆಪಿ ಸರ್ಕಾರ ಗೊಂದಲ ಮೂಡಿಸಿತ್ತು. ಅದನ್ನು ಸರಿಪಡಿಸಿ, ಕಾನೂನಿಗೆ ಬಲ ನೀಡಲು ನಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಒಳ ಮೀಸಲಾತಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿರುವ ಕ್ರಮಗಳಲ್ಲಿ ಯಾವುದೇ ಗೊಂದಲಗಳಿಲ್ಲ. ಎ,ಬಿ,ಸಿ,ಡಿ ಎಂಬ ವರ್ಗೀಕರಣ ಮಾಡಿ ಒಳ ಮೀಸಲಾತಿ ಹಂಚಿಕೆ ಮಾಡಲಾಗಿದೆ. ಅದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ನಂತರ ಕಾನೂನು ರೂಪಿಸಿ, ಜಾರಿಗೊಳಿಸಲು ಚರ್ಚಿಸಲಾಗಿತ್ತು. ಆದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಗ್ರೀವಾಜ್ಞೆ ಬದಲಾಗಿ ಕಾನೂನು ರೂಪಿಸಿ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಕಾನೂನು ಸಚಿವರಿಗೆ ಸೂಚನೆ ನೀಡಲಾದೆ ಎಂದು ವಿವರಿಸಿದರು.
ಬಿಜೆಪಿಯ ಸಂಸದ ಗೋವಿಂದ ಕಾರಜೋಳ ಅವರಿಗೆ ಒಳ ಮೀಸಲಾತಿ ವಿಚಾರ ಅರ್ಥವಾಗಿಲ್ಲ. ಅವರ ಸರ್ಕಾರ ಆಡಳಿತದಲ್ಲಿ ಸಾಕಷ್ಟು ಗೊಂದಲ ಮೂಡಿಸಿತ್ತು. ನಾವು ಅದನ್ನು ಸರಿಪಡಿಸಿ ಮತ್ತು ಕಾನೂನಿನ ಶಕ್ತಿ ನೀಡಲು ಮುಂದಾಗಿದ್ದೇವೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು.

 
                                    