ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿಯ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆಗೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಪ್ರಕರಣವನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು, ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪುರಸ್ಕರಿಸಿದ್ದಾರೆ. ಅಧಿಕಾರ ವ್ಯಾಪ್ತಿ ಇಲ್ಲದ ನ್ಯಾಯಾಲಯದಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಆದ್ದರಿಂದ ತಾಂತ್ರಿಕ ಕಾರಣಗಳಿಗಾಗಿ ಪ್ರಕರಣ ರದ್ದುಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪಡಿತರ ಚೀಟಿ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂಬ ಹಿನ್ನೆಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ, ವಿಜಯಪುರ ಶಾಸಕ ಬಸನಗೌಡ ಪಾಟೀಲ
ಯತ್ನಾಳ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಸಂಬಂಧ ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಯತ್ನಾಳ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ, ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ
ವಿಶೇಷ ನ್ಯಾಯಪೀಠದ (ಧಾರವಾಡ) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪುರಸ್ಕರಿಸಿ ಈ ಆದೇಶ ನೀಡಿದ್ದಾರೆ.