ನವದೆಹಲಿ, ನ.20: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಕರ್ನಾಟಕದಿಂದ ಬಾಕಿ ಇರುವ ಸುಮಾರು 11 ಟಿಎಂಸಿ ನೀರು ಬಿಡುಗಡೆಗೆ ನಿರ್ದೇಶನ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಸಿಂಗ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮುಕ್ತ ನ್ಯಾಯಾಲಯದಲ್ಲಿ ಈ ಆದೇಶ ಪ್ರಕಟಿಸಿತು.
ವಿಚಾರಣೆ ವೇಳೆ ಎರಡು ಅರ್ಜಿಗಳನ್ನು ವಜಾಗೊಳಿಸಿರುವುದಾಗಿ ತಿಳಿಸಿದ ನ್ಯಾಯಪೀಠ, ತಮಿಳುನಾಡು ಸರ್ಕಾರ ಮತ್ತೊಂದು ಅರ್ಜಿಯನ್ನೂ ಸಲ್ಲಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿತು. ‘ತಮಿಳುನಾಡು ಸರ್ಕಾರದ ಬಳಿ ಸಾಕಷ್ಟು ಹಣವಿದೆ’ ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಅಭಿಪ್ರಾಯಪಟ್ಟರು. ಮೂರನೇ ಅರ್ಜಿಯನ್ನು ಅಂದಿನ ಮಟ್ಟಿಗೆ ಮುಂದೂಡಿದರು.
ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ನ ಕಾವೇರಿ ನೀರು ಹಂಚಿಕೆ ತೀರ್ಪಿನಂತೆ ಈ ವರ್ಷ ತಮಿಳುನಾಡಿಗೆ ನೀಡಬೇಕಾದ ನೀರನ್ನು ಬಿಡುಗಡೆ ಮಾಡಿಲ್ಲ. ಇದರಿಂದ ಬೆಳೆಗಳಿಗೆ ಹಾನಿಯಾಗುತ್ತಿದೆ ಎಂದು ತಮಿಳುನಾಡು ಆರೋಪಿಸಿತ್ತು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸುತ್ತಿದ್ದರೂ, ಕರ್ನಾಟಕದಿಂದ ಬಾಕಿ ಇರುವ ನೀರು ಬಿಡುಗಡೆಗೆ ನಿರ್ದೇಶನ ನೀಡಿಲ್ಲ ಎಂದು ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ತಮಿಳುನಾಡಿನ ಮನವಿಯನ್ನು ಪುರಸ್ಕರಿಸದೆ ಅರ್ಜಿಗಳನ್ನು ವಜಾಗೊಳಿಸಿದೆ.

