ಬೆಂಗಳೂರು: ಬೇಲಿಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಪ್ರಕರಣದಲ್ಲಿ ಪ್ರಮುಖ ಅಪರಾಧಿಯಾಗಿರುವ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಕಠಿಣ ಜೈಲು ಶಿಕ್ಷೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದೇ ಆದರೆ, ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಷರತ್ತುಗಳನ್ನು ವಿಧಿಸಬೇಕು ಎಂದು ಸಿಬಿಐ ಹೈಕೋರ್ಟ್ ನಲ್ಲಿ ವಾದ ಮಂಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ತಡೆಹಿಡಿಯಬೇಕು ಎಂದು ಕೋರಿ ಶಾಸಕ ಸತೀಶ್ ಸೈಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ಸಂದರ್ಭದಲ್ಲಿ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ಸಂಪೂರ್ಣವಾಗಿ ಶಿಕ್ಷೆಯನ್ನು ತಡೆಹಿಡಿಯುವುದು ಸರಿಯಲ್ಲ. ಆದರೆ ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಅಪರಾಧಿಗೆ ಷರತ್ತುಗಳನ್ನು ವಿಧಿಸಿ ಶಿಕ್ಷೆಯನ್ನು ತಡೆಹಿಡಿಯುವ ಸಂಬಂಧ ಪರಿಶೀಲನೆ ನಡೆಸಬಹುದು ಎಂದು ಮನವಿ ಮಾಡಿ ಕೊಂಡರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಈ ತಿಂಗಳ 23 ರೊಳಗೆ ಆದೇಶ ಮಾಡುವುದಾಗಿ ತಿಳಿಸಿ ವಿಚಾರಣೆಯನ್ನು ಮುಂದೂಡಿದರು.