ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಾಯ್ಯ ಘೋಷಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ . ಚಾಮುಂಡಿಬೆಟ್ಟವಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿ ಅಳವಡಿಕೆ ಮಾಡಲಾಗುವುದು. ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಚಾಮುಂಡಿ ಬೆಟ್ಟ ಅಭಿವೃದ್ಧಿ ದೃಷ್ಟಿಯಿಂದ ಪ್ರಾಧಿಕಾರ ಮಾಡಿದ್ದೇವೆ. ಹಾಗಿಯೇ ಭಕ್ತಾದಿಗಳಿಗೆ ಸೌಲಭ್ಯ ಒದಗಿಸಲು ಪ್ರಾಧಿಕಾರ ರಚನೆ ಮಾಡಲಾಗಿದ್ದು, ಅಪರಾಧ ತಡೆಗಟ್ಟಲು ಟಾಸ್ಕ್ಫೋರ್ಸ್ ರಚನೆ ಮಾಡುತ್ತೇವೆ. ದಸರಾ ಸಂದರ್ಭದಲ್ಲಿ ವಿವಿಧ ಭಾಗದಿಂದ ಜನರು ಬರುತ್ತಾರೆ. ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯ ಒದಗಿಸಬೇಕಿದೆ. ಚಾಮುಂಡಿಬೆಟ್ಟದಲ್ಲಿ ಸ್ವಚ್ಛತೆ ಬಗ್ಗೆ ಗಮನಹರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೇಂದ್ರ ಸರ್ಕಾರದ ಪ್ರಸಾದ ಯೋಜನೆ ಜಾರಿ ಮಾಡಬೇಕು. ಈ ಯೋಜನೆ ಬೇಕಾದ ಹೆಚ್ಚುವರಿ 60 ಕೋಟಿ ರೂ, ಹಣ ಪ್ರಾಧಿಕಾರ ಭರಿಸಲಿದೆ. 5 ಸಮೂಹ ದೇವಾಲಯಗಳ ಜೀರ್ಣೋದ್ಧಾರ. ಪ್ರಸನ್ನ ಕೃಷ್ಣಸ್ವಾಮಿ ದೇವಾಲಯ, ಗಾಯತ್ರಿ ಅಮ್ಮನವರ ದೇವಾಲಯ, ಕೋಟೆ ಆಂಜನೇಯ ದೇವಾಲಯ, ಭುವನೇಶ್ವರಿ ದೇವಾಲಯ, ವರಹಾಸ್ವಾಮಿ ದೇವಾಲಯ ಜೀರ್ಣೋದ್ಧಾರ ಮಾಡಲಾಗುವುದು. ದೇವಾಲಯ ಒಳಭಾಗದಲ್ಲಿ ಮೊಬೈಲ್ ಬಳಕೆ ಮತ್ತು ಫೋಟೋಗ್ರಫಿ ನಿಷೇಧಿಸಲಾಗಿದೆ. ಬೆಟ್ಟದ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ, ಶಾಶ್ವತ ಸಿಬ್ಬಂದಿ ಮಕ್ಕಳಿಗೆ ಶಿಕ್ಷಣ ಸೌಲಭ್ಯ ನೀಡಲಾಗುತ್ತದೆ. ಚಾಮುಂಡಿ ಬೆಟ್ಟ ಮತ್ತಷ್ಟು ಆಕರ್ಷಣೀಯವಾಗಬೇಕು. ದಾಸೋಹ ಭವನದಲ್ಲಿ ಊಟದ ವ್ಯವಸ್ಥೆ ಸುಧಾರಣೆ ಮಾಡಲಾಗುತ್ತೆ. ರುಚಿಕರ ಊಟ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು.