ಚನ್ನಪಟ್ಟಣ ಮೈತ್ರಿ ಟಿಕೆಟ್ ಕಗ್ಗಂಟು ಮುಂದುವರಿದಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪದೇ ಪದೇ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜೊತೆ ಸಿ.ಪಿ. ಯೋಗೇಶ್ವರ್ ಸೋಮವಾರ ದೆಹಲಿಗೆ ತೆರಳಲಿದ್ದಾರೆ.
ಇನ್ನೂ ಈ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ನಾಯಕರು ಜವಾಬ್ದಾರಿ ತೆಗೆದುಕೊಂಡು ಈ ಚುನಾವಣೆ ನಡೆಸಬೇಕು. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಹೆಚ್‌ಡಿಕೆ ಹೊಣೆಗಾರಿಕೆ ಇದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಬೇಕು. ಮುಂದಿನ ವಾರ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ. 100ಕ್ಕೆ 100ರಷ್ಟು ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನನಗೆ ಟಿಕೆಟ್ ಕೊಡುವ ಮಾತು ಕೊಟ್ಟಿದ್ದಾರೆ. ಆದರೆ ಇದು ಕುಮಾರಸ್ವಾಮಿ ಅವರ ಕ್ಷೇತ್ರ. ಹಾಗಾಗಿ ವರಿಷ್ಠರ ಜೊತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರು ನನ್ನ ಜೊತೆ ಇದ್ದಾರೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲ್ಲುವ ಏಕೈಕ ಕ್ಷೇತ್ರ ಇದು. ಹಾಗಾಗಿ ಎರಡು ಪಕ್ಷದ ನಾಯಕರಿಗೆ ಟಿಕೆಟ್ ಕೊಡಿ ಅಂತ ಕೇಳಿದ್ದೇನೆ ಎಂದು ಹೇಳಿದ್ದಾರೆ.