ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರ ನಡೆ ವಿರೋಧಿಸಿ ‘ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ’ ಪಂಜಿನ ಮೆರವಣಿಗೆ ಮತ್ತು ರಾಜಭವನ ಮುತ್ತಿಗೆಗೆ ಕರೆ ನೀಡಿದೆ.
ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ. ಎಂ. ರಾಮಚಂದ್ರಪ್ಪ ಈ ಕುರಿತು ಮಾಹಿತಿ ನೀಡಿದರು. ಆಗಸ್ಟ್ 21ರಂದು ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ನಡೆಯಲಿದ್ದು, ಆಗಸ್ಟ್ 27ರಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತದೆ.
ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದು, ಆಗಸ್ಟ್ 29ರ ತನಕ ಯಾವುದೇ ಕ್ರಮ ಕೈಗೊಳ್ಳದಂತೆ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ನಾಡಿನ ನೆಲ, ಜಲ, ಭಾಷೆ ಮತ್ತು ದಮನಿತ ಸಮುದಾಯಗಳ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಜನರ ಆಶೀರ್ವಾದದಿಂದ ನಿರಂತರವಾಗಿ ಜನಸೇವೆಯಲ್ಲಿ ನಿರತರಾಗಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದು ಒಕ್ಕೂಟ ಹೇಳಿದೆ.
ಬಿಜೆಪಿ, ಜೆಡಿಎಸ್ ಪಕ್ಷಗಳ ಅಧಿಕಾರ ಅವಧಿಯಲ್ಲಿ ನಿವೇಶನ ಹಂಚಿಕೆ ಆಗಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ರಾಜಭವನವನ್ನು ಬಳಸಿಕೊಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿವೆ. ರಾಜ್ಯ ಸರ್ಕಾರವನ್ನು ಬೀಳಿಸಬೇಕೆಂಬುದು ಕೇಂದ್ರ ಸರ್ಕಾರದ ಪಿತೂರಿ, ಹೀಗಾಗಿ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಒಕ್ಕೂಟ ಆರೋಪಿಸಿದೆ.
ಭಾರತದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಸಂರಕ್ಷಕರಾಗಿ ಕಾರ್ಯನಿರ್ವಹಿಸಬೇಕಿದ್ದ ರಾಜ್ಯಪಾಲರು ಕೇಂದ್ರದ ಸರ್ಕಾರದ ಏಜೆಂಟರಂತೆ ವರ್ತಿಸುತ್ತಾ ಹಾಗೂ ಕುಮ್ಮಕ್ಕಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದ್ದಾರೆ. ರಾಜ್ಯಪಾಲರು ದುರುದ್ದೇಶದಿಂದ ಮುಖ್ಯಮಂತ್ರಿಗಳ ಮೇಲೆ ಮಸಿ ಬಳಿಯುತ್ತಾ ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸುವ ಹೀನ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ಒಕ್ಕೂಟ ದೂರಿದೆ.
ನಾಡಿನ ಶೋಷಿತ ಸಮುದಾಯಗಳ ಅಪೂರ್ವ ಬೆಂಬಲದಿಂದಾಗಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರ ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ದಲಿತ, ಹಿಂದುಳಿದ, ಅಲ್ಪ ಸಂಖ್ಯಾತ, ಸಮುದಾಯಗಳ ಹಕ್ಕುಗಳನ್ನು ಮತ್ತಷ್ಟು ಬಲಗೊಳಿಸಲಿದೆ ಎಂಬ ಭಯದ ಕಾರಣಕ್ಕಾಗಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂದು ಒಕ್ಕೂಟ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದೆ.