ಯಶಸ್ವಿ ಕಾರ್ಯಾಚರಣೆಯ ಮೂಲಕ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಕೊಳವೆ ಬಾವಿಯಿಂದ ಬಾಲಕ ಸಾತ್ವಿಕ್ ನನ್ನು ಜೀವಂತ ಹೊರಗೆ ತರಲು ಶ್ರಮಿಸಿದ ರಕ್ಷಣಾ ಸಿಬ್ಬಂದಿಯ ಕಾರ್ಯದಕ್ಷತೆ ಹಾಗೂ ಸಾರ್ವಜನಿಕರ ಸಹಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಂಸಿದ್ದಾರೆ.
ರಕ್ಷಣಾ ಸಿಬ್ಬಂದಿ ಹಗಲಿರುಳೆನ್ನದೆ ಪಟ್ಟ ಶ್ರಮ, ಮಗುವಿನ ಕುಟುಂಬ ಹಾಗೂ ನಾಡಿನ ಕೋಟ್ಯಾಂತರ ಜನರ ಹರಕೆ ಹಾರೈಕೆಗಳಿಗೆ ಫಲ ದೊರಕಿರುವುದು ಖುಷಿಯಾಗಿದೆ ಎಂದು ತಮಗಾದ ಸಂತಸವನ್ನು ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗಬೇಕಾಗುತ್ತದೆ. ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಇನ್ನಾದರೂ ಇಂತಹ ಘಟನೆಗಳಿಂದ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.