ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಪ್ರಗತಿ ಪರಿಶೀಲನಾ ಸಭೆ; ಗುಣಮಟ್ಟದಲ್ಲಿ ರಾಜಿಯಾಗದಂತೆ ಸಿಎಂ ಸಿದ್ದರಾಮಯ್ಯ ಸೂಚನೆ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ಗೃಹ ಕಚೇರಿ ಕೃಷ್ಣಾದಲ್ಲಿ  “ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ”ಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವರಾದ ಎಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಕೆ  ಎಚ್ ಮುನಿಯಪ್ಪ, ಪ್ರಿಯಾಂಕ ಖರ್ಗೆ, ರಹೀಂ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ ರೂ. 2040 ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ.920 ಕೋಟಿ ವೆಚ್ಚ ಭರಿಸಲಾಗಿದೆ. ಇನ್ನೂ ರೂ. 1205 ಕೋಟಿ ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ. ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ರೂ.1890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ರೂ. 8666.50 ಕೋಟಿ ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ.ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು ಎಂದು ಸಿಎಂ  ತಿಳಿಸಿದರು.

2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು ರೂ. 8666.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಿದರು.

ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

More articles

Latest article