ಸಿಪಿಐ(ಎಂ) ಮುಖಂಡ ಜಿ.ಸಿ.ಬಯ್ಯಾರೆಡ್ಡಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಟುಂಬದ ಮತ್ತು ಕಾಮ್ರೇಡ್ ಗಳ ದುಃಖದಲ್ಲಿ ಭಾಗಿಯಾದರು. ಇವರು ಸಂಯುಕ್ತ ಹೋರಾಟ ಕರ್ನಾಟಕ ಇದರ ಸಂಯೋಜಕರೂ ಹೌದು. ಬಯ್ಯಾರೆಡ್ಡಿ ಅವರು ಇಂದು ಮುಂಜಾನೆ 3 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಇವರು ಹಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಂಗಳವಾರ ತುಮಕೂರಿನಲ್ಲಿ ನಡೆದ ಸಿಪಿಎಂ ರಾಜ್ಯ ಸಮ್ಮೇಳನದಲ್ಲಿ ಅವರನ್ನು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕಿನ ಗಡಿಗವಾರಹಳ್ಳಿ ಗ್ರಾಮದ ಬಯ್ಯಾರೆಡ್ಡಿ ರಾಜ್ಯದಾದ್ಯಂತ ರೈತ, ಕಾರ್ಮಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು . ಚಿಕ್ಕಬಳ್ಳಾಪುರ ಮತ್ತು ಕೋಲಾರ ಮಾತ್ರವಲ್ಲದೆ ರಾಜ್ಯಾದ್ಯಂತ ನಡೆಯುವ ಅನೇಕ ಜನಪರ ಹೋರಾಟಗಳಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು.

1999ರ ಲೋಕಸಭಾ ಚುನಾವಣೆಯಲ್ಲಿ ಸಿಪಿಎಂ ಪಕ್ಷದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಬಯ್ಯಾರೆಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

More articles

Latest article