ಚಿಕ್ಕಬಳ್ಳಾಪುರ: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ. ಎಲ್ಲ ವಿಷಯಗಳಲ್ಲೂ ರಾಜಕೀಯ ಮಾಡುವುದೇ ಬಿಜೆಪಿ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ತಮ್ಮ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು?. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ವಾಗ್ದಾಳಿ ನಡೆಸಿದರು.
ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.
ಇಡಿ ದಾಳಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ತಿಳಿಸಿದರು.
ಸಾಮಾಜಿಕ ,ಆರ್ಥಿಕ, ಶೈಕ್ಷಣಿಕ ಸಮೀಕ್ಷೆ: ಮರು ಗಣತಿ:
ಜಾತಿ ಗಣತಿ ಬಗ್ಗೆ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ. ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದರು.
ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು.
ಕಾಲ್ತುಳಿತ ಪ್ರಕರಣದಲ್ಲಿ ಅನೇಕ ಆಯೋಗ ರಚನೆಯಾಗಿದ್ದು ಇವು ತಾರ್ಕಿಕ ಅಂತ್ಯ ಕಾಣುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ ಎಂದರು.
ಪಕ್ಷದ ವರಿಷ್ಠರ ತೀರ್ಮಾನ:
ಕಾಂತರಾಜ ಆಯೋಗ ವರದಿ ಬಗ್ಗೆ ಪಕ್ಷದ ವರಿಷ್ಠರ ನಿರ್ಧಾರ ಮುಖ್ಯಮಂತ್ರಿಗಳಿಗೆ ನಿರಾಸೆ ತಂದಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಪಕ್ಷದ ವರಿಷ್ಠರು ನಿರ್ಧಾರ ಮಾಡಿದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ತೀರ್ಮಾನವಲ್ಲ ಎಂದರು.
ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿ ಖಾಲಿ ಇರುವಡೆಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇನ್ನು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು, ಅವರ ವೇತನವನ್ನು ಹೆಚ್ಚಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ನಮ್ಮ ಸರ್ಕಾರ ಒತ್ತು ನೀಡಿದೆ ಎಂದರು.
ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ:
ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿ ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದರು.
ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಮುಕ್ತಾಯವಾಗಬಹುದು ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಭಾಗದ ಸಚಿವರು, ಶಾಸಕರು, ಹಾಗೂ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲಾಗಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಳೆದ ವರ್ಷ 52000 ಕೋಟಿ ರೂ.ಗಳ ಬಂಡವಾಳ ವೆಚ್ಚ ಇತ್ತು. ಈ ವರ್ಷ 83 ಸಾವಿರ ಕೋಟಿಯಾಗಿದೆ ಎಂದರು. 31000 ಕೋಟಿ ಬಂಡವಾಳ ವೆಚ್ಚ ಒಂದು ವರ್ಷದಲ್ಲಿ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರ ದಿವಾಳಿ ಹೇಗೆ ಆಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಐವತ್ತು ಸಾವಿರಕ್ಕೂ ಹೆಚ್ಚು ಅನುದಾನ ಒದಗಿಸಲಾಗಿದೆ ಎಂದರು. ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿದ್ದು, ಕೇಂದ್ರ ಸರ್ಕಾರ 600 ಭರವಸೆಗಳನ್ನು ನೀಡಿ ಶೇ.10ರಷ್ಟನ್ನೂ ಅನುಷ್ಠಾನ ಮಾಡಿಲ್ಲ ಎಂದರು.