ಮೈಸೂರು ಜಿಲ್ಲೆ ಸಚಿವರು, ಶಾಸಕರ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ; ಅಭಿವೃದ್ಧಿಗೆ ನೆರವಿನ ಭರವಸೆ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು ಮತ್ತು ಶಾಸಕರುಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರ ಅಹವಾಲುಗಳನ್ನು ಆಲಿಸಿದ ಮುಖ್ಯಮಂತ್ರಿಗಳು ಕ್ಷೇತ್ರಗಳ ಅಭಿವೃದ್ಧಿಗೆ ಎಲ್ಲ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.

ಶಾಸಕರ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ಪ್ರಮುಖವಾಗಿ ಕ್ಷೇತ್ರಕ್ಕೆ ಆಗಬೇಕಾದ ಕೆಲಸಗಳಿಗೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದು ಸಲಹೆ, ಸೂಚನೆಗಳನ್ನು ನೀಡಿದರು.‌ ಗ್ಯಾರಂಟಿಗಳ ಯಶಸ್ವೀ ಜಾರಿಯಿಂದ ಜಿಲ್ಲೆಯ ಆರ್ಥಿಕತೆ ಮೇಲೆ ಆಗಿರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಶಾಸಕರುಗಳ ಗಮನ ಸೆಳೆದರು.

ಸರ್ಕಾರ ಪ್ರತೀ ಕ್ಷೇತ್ರಕ್ಕೂ ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಒದಗಿಸಿದ್ದು, ಇದನ್ನು ಕ್ಷೇತ್ರದ ಜನರ, ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಜೊತೆಗೆ ಅವರ ಫಲಾನುಭವಿಗಳ ಜೊತೆ ಸಂಪರ್ಕದಲ್ಲಿ ಇರುವಂತೆ ಸಿಎಂ ಸೂಚನೆ ನೀಡಿದರು.

ಎಲ್ಲಾ ಕೆಡಿಪಿ ಸಭೆಗಳಲ್ಲೂ ಶಾಸಕರು, ಸಚಿವರು ಅರ್ಥಪೂರ್ಣವಾಗಿ ಪಾಲ್ಗೊಳ್ಳಬೇಕು. ಅದಕ್ಕೆ ಮೊದಲು‌ ಜನರ ಸಮಸ್ಯೆಗಳ ಬಗ್ಗೆ, ಕಾಮಗಾರಿಗೆ ಇರುವ ತಾಂತ್ರಿಕ ತೊಂದರೆಗಳ ಬಗ್ಗೆ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು‌ ನಿಧಾನ ಧೋರಣೆ ಬಗ್ಗೆ ಎಡಿಪಿ ಸಭೆಗಳಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಲಾಯಿತು.

ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿ ಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ಕಾಮಗಾರಿ ಪೂರ್ಣಗೊಳಿಸಲು ಕಾಲಾವಧಿ ನಿಗಧಿ ಮಾಡುವ ಕುರಿತೂ ಚರ್ಚೆ ನಡೆಯಿತು.

ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನ  ಮತ್ತು ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಜಾರಿಯ ಸ್ಥಿತಿ ಗತಿ ಕುರಿತು ಶಾಸಕರು ಮುಖ್ಯಮಂತ್ರಿಗಳ ಗಮನ ಸೆಳೆದರು.

More articles

Latest article