ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‌ಡ್ರೈವ್ ವೈರಲ್ ಮತ್ತು ಮಹಿಳಾ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಸ್ಐಟಿ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಈ ಮಹತ್ವದ ಸಭೆಯಲ್ಲಿ, ತನಿಖೆಯ ಪ್ರಗತಿ, ಮುಂದಿನ ತನಿಖೆಯ ದಿಕ್ಕಿನ ಬಗ್ಗೆ ಚರ್ಚೆ. ಪ್ರಸಕ್ತ ಕಾನೂನಾತ್ಮಕ ಪ್ರಕ್ರಿಯೆಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ.
ಡಿಜಿಐಜಿ ಅಲೋಕ್ ಮೋಹನ್, ಎಸ್ ಐಟಿ ಮುಖ್ಯಸ್ಥ ಬಿಕೆ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆ ಇದ್ದ ಕಾರಣ ದಾವಣಗೆರೆ ಪ್ರವಾಸ ಅರ್ಧ ಗಂಟೆ ಮುಂದೂಡಿಕೆ ಮಾಡಿಕೊಂಡಿದ್ದರು. ಹೀಗಾಗಿ ಎಸ್ಐಟಿ ಅಧಿಕಾರಿಗಳ ಜೊತೆ ಸಭೆ ಮುಗಿಸಿ ಸಿಎಂ ಸಿದ್ದರಾಮಯ್ಯ ಹೊರಟಿದ್ದು, ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.
ತನಿಖೆಯ ಹಂತ ಮತ್ತು ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂತ್ರಸ್ತ ಮಹಿಳೆಯರ ರಕ್ಷಣೆ ಸೇರಿದಂತೆ, ಕೇಸ್ ನಲ್ಲಿರುವ ಕೆಲ ಪ್ರಮುಖ ಅಂಶಗಳ ಬಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.
ಎರಡನೇ ಹಂತದ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಕೊನೆ ಹಂತದ ಪ್ರಚಾರ ಸಭೆಗೆ ಸಿಎಂ ಸಿದ್ದರಾಮಯ್ಯ ತೆರಳಿದ್ದು, ಇಂದು ದಾವಣಗೆರೆ, ಚಿಕ್ಕೊಡಿ, ಬೆಳಗಾವಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಇಂದು ರಾತ್ರಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಹರಿಹರದಲ್ಲಿ ಪ್ರಚಾರ ಮಾಡಲಿದ್ದಾರೆ. ಇಂದು ಮತ್ತು ನಾಳೆ ಕೊನೆಯ ಪ್ರಚಾರ ಸಭೆ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುತ್ತಾರೆ.