ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ವಾಡಿಕೆಯಷ್ಟು ಬಾರದೆ ಕೊರತೆ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಹಲವು ಅಗತ್ಯ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಚರ್ಚಿಸಲಾಯಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಜರುಗಿತು.
ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ. ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಡಿಸಿಗಳೇ ಹೊಣೆ: ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.
ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಬೇಕು ಎಂದರು.
ಅನುದಾನದ ಕೊರತೆಯಿಲ್ಲ : ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2410 ಗ್ರಾಮ ಪಂಚಾಯತ್ಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಟ್ಯಾಂಕರ್ಗಳ ಮೂಲಕ 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.
ಎಲ್ಲೆಲ್ಲಿ ನೀರಿನ ತೊಂದರೆ: ಕುಡಿಯುವ ನೀರಿನ ತೊಂದರೆ ಇರುವ ಗ್ರಾಮಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ಕಲಬುರಗಿ ಜಿಲ್ಲೆಯ 147 ಗ್ರಾಮ ಪಂಚಾಯತ್, ಬಾಗಲಕೋಟೆ 114, ಬೆಳಗಾವಿಯ 127, ಚಿಕ್ಕಮಗಳೂರಿನ 115, ಹಾವೇರಿಯ 138, ಮಂಡ್ಯ 130, ತುಮಕೂರಿನ 141 ಹಾಗೂ ಉತ್ತರಕನ್ನಡ ಜಿಲ್ಲೆಯ 125 ಗ್ರಾಮ ಪಂಚಾಯತ್ಗಳಲ್ಲಿ ಸಮಸ್ಯೆ ಎದುರಾಗಬಹುದು ಎಂದು ತಿಳಿಸಲಾಯಿತು.
ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಗುರುತಿಸಿದರು.

