ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಸಚಿವ ಎಂ.ಬಿ ಪಾಟೀಲರು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದು, ಈ ಸಂಬಂಧ ಸಚಿವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಇಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ನಿಯಮದ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದಾರೆ. ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ. ಇವರ ಕೆಲಸಗಳಿಗೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯ ಸುಮಾರು ನೂರು ಎಕರೆಗೂ ಹೆಚ್ಚು ಮೂಲೆ ನಿವೇಶನಗಳನ್ನ ಸಾಮಾನ್ಯ ಹಂಚಿಕೆ ದರದಲ್ಲಿ ಹಂಚಿಕೆ ಮಾಡಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂಪಾಯಿಗಿಂತ ಹೆಚ್ಚು ನಷ್ಟವಾಗಿದೆ ಎಂದು ದೂರಿದ್ದಾರೆ.