ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು “ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ”ಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ ಅವಶ್ಯಕತೆ ಇರುತ್ತದೆ. ಇದರ ಪೈಕಿ ಶೇಕಡಾ 84% ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ನೂ ಅಂದಾಜು 2685 ಎಕರೆಗಳಷ್ಟು ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕಿದೆ. ರಾಜ್ಯದಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ಮಾಣ ಕಾಮಗಾರಿಗಳಿಗೆ ರೂ. 2581.67 ಕೋಟಿ ರೂ, ಭೂಸ್ವಾಧೀನ ಪ್ರಕ್ರಿಯೆಗೆ ರೂ. 2950.22 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಣ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಸೂಚಿಸಿದರು.
ಮೆಕ್ಕೆಜೋಳ ಮತ್ತು ತೊಗರಿ ಖರೀದಿ:
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಮಾಡಿದ್ದು, ಇನ್ನೂ 76,430 ಮೆ.ಟನ್ ಖರೀದಿಸಲು ಬಾಕಿಯಿದೆ. ಒಟ್ಟು 93,782 ಮೆ.ಟನ್ ಮೆಕ್ಕೆಜೋಳ ಖರೀದಿಗೆ ಇಂಡೆಂಟ್ ಪಡೆಯಲಾಗಿದ್ದು, ನಿಗದಿತ ಪ್ರಮಾಣದ ಮೆಕ್ಕೆಜೋಳ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಎಥೆನಾಲ್ ಖರೀದಿ ಕುರಿತಾಗಿ ಕೇಂದ್ರ ಸರ್ಕಾರಕ್ಕೆ ಮಾಡಿದ್ದ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಕುರಿತು ನಕಾರಾತ್ಮಕ ಧೋರಣೆಯನ್ನು ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಇಂಡೆಂಟ್ ನಿಗದಿಪಡಿಸಿರುವ ಪ್ರಮಾಣದಷ್ಟು ಮೆಕ್ಕೆಜೋಳ ಖರೀದಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಸಚಿವರಾದ ಎಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಕೆ ಎಚ್ ಮುನಿಯಪ್ಪ, ಪ್ರಿಯಾಂಕ ಖರ್ಗೆ, ರಹೀಂ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

