ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Most read

 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಮಹಿಳೆಯರ ಪರ ಇರುವ ಪಕ್ಷ, ಮಹಿಳೆಯರ, ಯುವಕರ, ವೃದ್ಧರ ಹೀಗೆ… ಎಲ್ಲರಿಗೂ ಸಲ್ಲುವ ಪಕ್ಷ ಕಾಂಗ್ರೆಸ್ ಪಕ್ಷ ಎಂದರು.

ಎಲ್ಲರಿಗೂ ಅನ್ನ, ಅಕ್ಷರ, ವಿದ್ಯೆಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈಗ  ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಲಿದೆ. ಮಹಿಳೆಯರು ಇವತ್ತು ಯಾವುದರಲ್ಲೂ‌ ಹಿಂದೆ ಇಲ್ಲ. ಸಮಾಜದಲ್ಲಿ ಮಹಿಳೆಯರನ್ನು ಬಿಟ್ಟು ಇರುವುದಕ್ಕೂ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಬಂದರೆ,  ಕರ್ನಾಟಕ ವಿಧಾನಸಭೆಯಲ್ಲಿ 70 ರಿಂದ 78 ರವರೆಗೆ ಶಾಸಕಿಯರು‌ ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ. 1999ರಲ್ಲಿ ನಾನು ಕೂಡ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡೆ.  ನಮ್ಮ ಹಿರಿಯ ನಾಯಕಿ ಮಾರ್ಗರೇಟ್ ಅಳ್ವ ಅವರೇ ನನಗೆ ಸ್ಫೂರ್ತಿ. ಹಂತ ಹಂತವಾಗಿ ಮೇಲೆ ಬಂದು ಇಂದು ಸರ್ಕಾರದಲ್ಲಿ ಸಚಿವರಾಗಿರುವೆ. ಕಾಂಗ್ರೆಸ್ ಪಕ್ಷ ಸಾಮಾನ್ಯರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ವೇಳೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಅಲ್ಲಂ ವೀರಭದ್ರಪ್ಪ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ‌ ರೆಡ್ಡಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್, ಮುಖಂಡರಾದ ಜಲಜಾ ನಾಯ್ಕ್, ಮಂಜುಳಾ ನಾಯ್ಡು, ಪುಷ್ಪ ಅಮರ್ ನಾಥ್ ಸೇರಿದಂತೆ ನೂರಾರು ಸಂಖ್ಯೆಯ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

More articles

Latest article