ನವದೆಹಲಿ: ದೇಶದ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿದ್ದ ಇಂದಿರಾ ಗಾಂಧಿ ಅವರ 108 ನೇ ಜನ್ಮದಿನಾಚರಣೆ ಆಚರಿಸಲಾಗುತ್ತಿದೆ. ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಇಂದಿರಾ ಅವರನ್ನು ಸ್ಮರಿಸಿದ್ದಾರೆ.
ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಅನೇಕ ಮುಖಂಡರು ಇಂದಿರಾ ಸ್ಮಾರಕ ಶಕ್ತಿ ಸ್ಥಳಕ್ಕೆ ತೆರಳಿ ಗೌರವ ಸಲ್ಲಿಸಿ ಅವರ ಕೊಡುಗೆಗಳನ್ನು ಸ್ಮರಿಸಿದ್ದಾರೆ.
ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ದೇಶದ ಒಳಿತಿಗಾಗಿ ನಿರ್ಭೀತಿಯಿಂದ ನಿರ್ಧಾರಗಳನ್ನು ಕೈಗೊಳ್ಳಲು ಮತ್ತು ಎಂತಹುದೇ ಪರಿಸ್ಥಿತಿಯಲ್ಲಿ ದೇಶದ ಹಿತಾಸಕ್ತಿಯನ್ನು ಆದ್ಯತೆಯನ್ನಾಗಿರಿಸಿ ಕೊಳ್ಳಲು ಮೊದಲ ನನ್ನ ಅಜ್ಜಿ ಇಂದಿರಾ ಗಾಂಧಿ ಅವರೇ ನನಗೆ ಸ್ಫೂರ್ತಿಯಾಗಿ ನಿಲ್ಲುತ್ತಾರೆ. ಅವರ ಧೈರ್ಯ ಮತ್ತು ದೇಶಭಕ್ತಿ ಅನ್ಯಾಯದ ವಿರುದ್ಧ ನಿರಂತರವಾಗಿ ಹೋರಾಟ ನಡೆಸಲು ನನಗೆ ಶಕ್ತಿ ನೀಡಿದೆ ಎಂದು ಸ್ಮರಿಸಿಕೊಂಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ತಮ್ಮ ಪೋಸ್ಟ್ ನಲ್ಲಿ ಇಂದಿರಾ ಗಾಂಧಿ ಅವರ ಕೊಡುಗೆ ಮತ್ತು ಧೈರ್ಯವನ್ನು ಶ್ಲಾಘಿಸಿದ್ದಾರೆ. ದೇಶದ ಪ್ರಗತಿಗೆ ಅವರು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು. ದೇಶದ ಏಕತೆ ಮತ್ತು ಒಗ್ಗಟ್ಟಿಗಾಗಿ ತಮ್ಮನ್ನೇ ಸಮರ್ಪಿಸಿಕೊಂಡರು. ಎಂದು ನೆನಪಿಸಿಕೊಂಡಿದ್ದಾರೆ.
ಕೆಸಿ ವೇಣುಗೋಪಾಲ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಮತ್ತು ವಿವಿಧ ಪಕ್ಷಗಳ ಮುಖಂಡರು ಇಂದಿರಾಗಾಂಧಿ ಅವರನ್ನು ಸ್ಮರಿಸಿಕೊಂಡಿದ್ದಾರೆ.

