ದಾವಣಗೆರೆ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವುದು 11 ವರ್ಷಗಳ ನಂತರ ಜ್ಞಾನೋದಯವಾಗಿದೆಯೇ ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ.ಪ್ರಭಾ ಮಲ್ಲಿಕಾರ್ಜುನ್ ವ್ಯಂಗ್ಯವಾಡಿದ್ದಾರೆ. ನರೇಗಾ ಯೋಜನೆಯನ್ನು ಮರು ಸ್ಥಾಪಿಸುವವರೆಗೂ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದೂ ಅವರು ಘೋಷಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಈ ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ತನಿಖೆ ನಡೆಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅವಕಾಶವಿತ್ತು. ಆದರೆ ಮಹಾತ್ಮಾ ಗಾಂಧಿ ಅವರ ಹೆಸರನ್ನು ಕೈಬಿಡುವ ಉದ್ದೇಶದಿಂದ ಯೋಜನೆಯ ಮೂಲಸ್ವರೂಪವನ್ನೇ ಬದಲಿಸಿ ಹೊಸ ನಾಮಕರಣ ಮಾಡಿದ್ದಾರೆ ಎಂದು ಆಪಾದಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ, ನರೇಗಾ ಯೋಜನೆಯು ಗ್ರಾಮೀಣ ಪ್ರದೇಶದ ಬಡವರಿಗೆ ವರ್ಷವಿಡೀ ಉದ್ಯೋಗ ನೀಡಿತ್ತು. ಈ ಮೂಲಕ ಆರ್ಥಿಕ ಸಬಲೀಕರಣಕ್ಕೆ ಡಾ. ಮನಮೋಹನ್ ಸಿಂಗ್ ಸರ್ಕಾರ ಒತ್ತು ನೀಡಿತ್ತು. ಗ್ರಾಮಗಳ ಅಭಿವೃದ್ಧಿ ನಡೆಯುತ್ತಿತ್ತು. ಮೂಲಭೂತ ಸೌಕರ್ಯಗಳಾದ ರಸ್ತೆ, ಶಾಲೆ, ಕೆರೆ, ಚರಂಡಿ, ಕಾಲುವೆ ಸೇರಿ ಹಲವು ಕಾಮಗಾರಿಗಳನ್ನು ನಡೆಸಲಾಗುತ್ತಿತ್ತು. ಆದರೆ ಈ ಯೋಜನೆಯ ಸ್ವರೂಪವನ್ನೇ ಗ್ರಾಮೀಣಾಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡಲಿ ಪೆಟ್ಟು ನೀಡಿದೆ ಎಂದು ಆರೋಪಿಸಿದರು.
ಕೇಂದ್ರ ಮತ್ತು ರಾಜ್ಯದ ಅನುದಾನದ ಪಾಲನ್ನು 60:40ಕ್ಕೆ ಬದಲಾವಣೆ ಮಾಡಲಾಗಿದೆ. ಇದರಿಂದ ರಾಜ್ಯಗಳಿಗೆ ಹೆಚ್ಚಿನ ಹೊರೆಯಾಗಲಿದೆ. ಒಟ್ಟಾರೆ ಈ ಯೋಜನೆಯಿಂದ ಗ್ರಾಮೀಣ ಜನರಿಗೆಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ದೂರಿದರು.

