ಬೆಂಗಳೂರು, ಆ.20: ಬಿಜೆಪಿ ಶಾಸಕರು ಹಾಗೂ ಮುಖಂಡರು ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನವನ್ನು ಸುಗಮವಾಗಿ ನಡೆಯದಂತೆ ಅಡ್ಡಿಪಡಿಸಿ, ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸಿ ಕಾಂಗ್ರೆಸ್ ಪಕ್ಷ ನಾಳೆ (ಆಗಸ್ಟ್ 21) ಪ್ರತಿಭಟನೆ ನಡೆಸಲಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಗುರುವಾರ ಪಕ್ಷದ ಎಲ್ಲ ಶಾಸಕರಿಗೆ ಪತ್ರ ಬರೆದಿದ್ದು, ನಾಳಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದಾರೆ.
ಪ್ರಸ್ತುತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲ ಎದುರಾಗಿದ್ದು, ರೈತರು ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ, ಬರ ಪರಿಹಾರ, ನೀರಾವರಿ, ಮೂಲಸೌಕರ್ಯ ಸೇರಿದಂತೆ ಜನಪರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವುದಕ್ಕಾಗಿಯೇ ಸರ್ಕಾರ ಈ ಅಧಿವೇಶನವನ್ನು ಕರೆದಿದೆ. ಆದರೆ ಬಿಜೆಪಿ ಶಾಸಕರು ಸದನದ ಘನತೆ ಮತ್ತು ಗೌರವವನ್ನು ಮರೆತು, ರಾಜ್ಯದ ಎಲ್ಲ ವರ್ಗದ ಜನರು ಎದುರಿಸುವ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡದೆ, ಅನಾವಶ್ಯಕವಾಗಿ ಸದನದ ಸಮಯವನ್ನು ಕೇವಲ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಜನವಿರೋಧಿ ಮತ್ತು ರೈತ ವಿರೋಧಿ ನಡೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್ ಪಕ್ಷದ ವಿಧಾನಸಭೆ ಹಾಗೂ ವಿಧಾನಪರಿಷತ್ ಶಾಸಕರು ತಪ್ಪದೇ ನಾಳೆ ಬೆಳಿಗ್ಗೆ 10:15 ಗಂಟೆಗೆ ವಿಕಾಸ ಸೌಧ ಮುಂಭಾಗದ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಆಯೋಜಿಸಲಾಗಿರುವ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಬಿ.ಕೆ. ಹರಿಪ್ರಸಾದ್ ಕರೆ ನೀಡಿದ್ದಾರೆ.

