ಚಿತ್ರದುರ್ಗ ಜ 28: ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಸೂಚಿಸಿದರು.
ಮಂಡಲ್ ವರದಿಯನ್ನು ಬಿಜೆಪಿ ಮತ್ತು RSS ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದರು.
ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಮುಖ್ಯಮಂತ್ರಿಗಳು ಟೀಕಿಸಿದರು.