ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಹಲವೆಡೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಜೋಯಿಡಾ, ದಾಂಡೇಲಿ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಆರು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಖಾನಾಪುರ, ಬೈಲಹೊಂಗಲ, ಕಿತ್ತೂರು, ಚಿಕ್ಕೋಡಿ, ಬೆಳಗಾವಿ, ನಿಪ್ಪಾಣಿಯ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25 ಹಾಗೂ 26ರಂದು ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಧಾರವಾಡದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಧಾರವಾಡ ಜಿಲ್ಲೆಯಾದ್ಯಂತ 2 ದಿನಗಳ ಕಾಲ ರಜೆ ಘೋಷಿಸಲಾಗಿದೆ. ಜುಲೈ 25 ಹಾಗೂ 26ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಾಪ್ರಭು ತಿಳಿಸಿದ್ದಾರೆ.
ಹಾಸನದಲ್ಲಿ ಭಾರಿ ಮಳೆ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಸಕಲೇಶಪುರದಲ್ಲಿ ಮಳೆ ಪ್ರಮಾಣ ಹೆಚ್ಚುತ್ತಲೇ ಇದ್ದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.