ಕಾರ್ಪೊರೇಟ್ ಸಂಸ್ಥೆಗಳು  ಐಟಿಐ ಗಳನ್ನು ದತ್ತುಪಡೆಯಬೇಕು; ಶರಣಪ್ರಕಾಶ ಪಾಟೀಲ್‌ ಸಲಹೆ

Most read

ಬೆಂಗಳೂರುಯುವ ಸಮೂಹಕ್ಕೆ ಕೌಶಲ್ಯದ ತರಬೇತಿ ನೀಡಿ, ಸಬಲೀಕರಣ ಮಾಡಲು ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಕೈಗೊಂಡಿದೆ. ಕಾರ್ಪೊರೇಟ್ ಸಂಸ್ಥೆಗಳು ಕೂಡಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು ಮತ್ತು ಉದ್ಯೋಗಾಧರಿತ ಕೌಶಲ್ಯ ತರಬೇತಿ ಕೊಡಿಸಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ.

ಬೆಂಗಳೂರಿನ ಐಎಎಸ್ ಆಫೀಸರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭವೊಂದರಲ್ಲಿ ತರಬೇತಿ ಹಾಗೂ ಉದ್ಯೋಗಾವಕಾಶಗಳಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಜತೆಗೆ ಒಪ್ಪಂದಕ್ಕೆ ಸಹಿ ಹಾಕಿ ಅವರು ಮಾತನಾಡಿದರು.

ರಾಜ್ಯದ ಹತ್ತು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಆಧುನೀಕರಣಕ್ಕೆ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಲವು ಸಂಸ್ಥೆಗಳ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಐಟಿಐ ಸಂಸ್ಥೆಗಳ ಉನ್ನತೀಕರಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ. ಐಟಿಐಗಳಲ್ಲಿರುವ ಹಳೆಯ ಉಪಕರಣಗಳನ್ನು ಬದಲಾವಣೆ ಮಾಡಿ ಹೊಸ ಉಪಕರಣಗಳನ್ನು ಅಳವಡಿಸಲು ಮುಂದಾಗಿದ್ದೇವೆ. ಇದರಿಂದ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಬೆಂಗಳೂರು, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಪ್ರಧಾನಮಂತ್ರಿ ಸೂರ್ಯ ಘರ್-ಮುಫ್ತ್ ಬಿಜ್ಲಿ ಯೋಜನೆಯಡಿಯಲ್ಲಿ ರಾಜ್ಯದ 252 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಐದು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಸೌರ ಚಾವಣಿ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ಒಂದು ವಾರದ ಅಲ್ಪಾವಧಿ ತರಬೇತಿಯನ್ನು ಪಡೆದಿದ್ದಾರೆ. ಇವರಿಗೆ ಈಗ ಹೆಚ್ಚಿನ ಉದ್ಯೋಗ ಅವಕಾಶ ದೊರೆಯಲಿದೆ ಎಂದು ತಿಳಿಸಿದರು.

ನವದೆಹಲಿಯಲ್ಲಿ ಡೈರೆಕ್ಟರೇಟ್ ಜನರಲ್ ಆಫ್ ಟ್ರೈನಿಂಗ್ (DGT) ಪ್ರಕಾರ ಅತ್ಯುತ್ತಮ ಶ್ರೇಣಿ ಪಡೆದ ತುಮಕೂರು, ಮುಳಬಾಗಲು, ಮಾಲೂರು, ಪಾವಗಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ 10 ತರಬೇತಿದಾರರಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು. ಐಟಿಐಗಳ ಪ್ರಾಂಶುಪಾಲರಿಗೆ ವಿಶೇಷ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಐಟಿಐಗಳಲ್ಲಿನ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅವುಗಳನ್ನು ಕೂಡಲೇ ನಿವಾರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

More articles

Latest article