ಬೆಂಗಳೂರು: ಕೋವಿಡ್ ಪರೀಕ್ಷೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳು ಬಂದಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಕೋವಿಡ್ ನಿರ್ವಹಣೆ ಕುರಿತು ಅವರು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಸೂಚನೆ ನೀಡಿದರು. ಕೋವಿಡ್ ನಿಯಂತ್ರಣ ದೃಷ್ಟಿಯಿಂದ ಎರಡೂ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದೂ ಅವರು ಸಲಹೆ ನೀಡಿದರು.
ಕೋವಿಡ್ ಕುರಿತು ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಕೋವಿಡ್ ಕುರಿತು ಯಾರೊಬ್ಬರೂ ಭಯ ಹುಟ್ಟಿಸಬಾರದು ಎಂದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಕುರಿತು ಸಭೆಯಲ್ಲಿ ವಿವರ ನೀಡಿದರು. ರಾಜ್ಯದಲ್ಲಿ ಮೇ ತಿಂಗಳ ನಂತರ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದ್ದು, ಪ್ರಸ್ತುತ ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕಳೆದ 10 ದಿನಗಳಲ್ಲಿ ಐದು ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11 ಮಂದಿ ಮೃತಟ್ಟಿದ್ದಾರೆ. ಈ ಸಾವುಗಳ ಪೈಕಿ 10 ಪ್ರಕರಣಗಳಲ್ಲಿ ಅನ್ಯ ಕಾರಣಗಳಿಗಾಗಿ ಸಾವು ಸಂಭವಿಸಿದೆ. ಕೋವಿಡ್ ಕಾರಣದಿಂದ ಸಾವು ಉಂಟಾಗಿಲ್ಲ. ಆಗ ಮುಖ್ಯಮಂತ್ರಿಗಳು ಪ್ರತಿ ಬಾರಿ ಕೊರೋನಾ ಸಾವು ಸಂಭವಿಸಿದಾಗ ಅದು ಕೊರೋನಾ ಸಾವೇ ಅಥವಾ ಅಲ್ಲವೇ ಎಂಬುದನ್ನು ಸ್ಪಷ್ಟವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಜನರಲ್ಲಿ ಇರುವ ಆತಂಕವನ್ನು ಕಡಿಮೆ ಮಾಡಬೇಕು ಎಂದು ಸೂಚಿಸಿದರು.
ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.