ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂಬತ್ತು ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಾಣು ಪತ್ತೆ ಸಂಬಂಧ 24 ಗಂಟೆಗಳಲ್ಲಿ 96 ಆರ್‌ಟಿ–ಪಿಸಿಆರ್ ಸೇರಿ 104 ಮಾದರಿಗಳ ಪರೀಕ್ಷೆ ನಡೆಸಲಾಗಿದೆ.
ಸೋಂಕು ದೃಢ ಪ್ರಮಾಣ ಶೇ 8.65 ರಷ್ಟಿದ್ದು, ಸಕ್ರಿಯ ಪ್ರಕರಣಗಳಲ್ಲಿ 46 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಈ ವರ್ಷ 98 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ 50 ಮಂದಿ ಈಗಾಗಲೇ ಚೇತರಿಸಿಕೊಂಡಿದ್ದಾರೆ. ಸೋಂಕಿತರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ದೈನಂದಿನ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು 150-200 ಕ್ಕೆ ಹೆಚ್ಚಿಸುವುದಾಗಿ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಪ್ರಮುಖ ಸಂಸ್ಥೆಗಳಾದ ನಿಮ್ಹಾನ್ಸ್, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (NIV) ಸೇರಿದಂತೆ 10 ಕೇಂದ್ರಗಳನ್ನು ಕೋವಿಡ್ ಪರೀಕ್ಷಾ ಕೇಂದ್ರಗಳಾಗಿ ಗೊತ್ತುಪಡಿಸಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ ಒಟ್ಟಾರೆ ಪರಿಸ್ಥಿತಿ ಆತಂಕಕಾರಿಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಲಾಗುತ್ತಿದೆ. ಅಧಿಕಾರಿಗಳು ಮತ್ತು ತಜ್ಞರು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದು, ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.