ಅರಣ್ಯದೊಳಗೆ ದನ ಕರು ಮೇಯಿಸುವುದಕ್ಕೆ ಶೀಘ್ರ ನಿರ್ಬಂಧ: ಸಚಿವ ಈಶ್ವರ್‌ ಖಂಡ್ರೆ

Most read

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶಗಳ ಒಳಗೆ ದನ, ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿರುವ ಸಚಿವರು, ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳನ್ನು ಸಾಕು ಪ್ರಾಣಿಗಳು ತಿಂದು ಹಾಕುತ್ತಿವೆ. ಇದರಿಂದ ಹೊಸ ಗಿಡಗಳು ಬೆಳೆಯದೇ ಅರಣ್ಯ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ಸಚಿವರು ತಿಳಿಸಿದ್ದಾರೆ.

ಅಪಾರ ಸಂಖ್ಯೆಯಲ್ಲಿ ಸಾಕುಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಅಲ್ಲದೇ ನಾಡಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ. ಇದು ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿಗಳ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಅರಣ್ಯ ಪ್ರದೇಶಗಳಲ್ಲಿ ಜಾನುವಾರು ಮೇಯಿಸುವುದನ್ನು ನಿಷೇಧಿಸಬೇಕು ಎಂದು ಪರಿಸರವಾದಿಗಳು ಆಗ್ರಹಪಡಿಸಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದು ಹಾಕುತ್ತವೆ. ಆಗ ದನಗಾಹಿಗಳು ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದನ್ನು ಪರಿಸರ ಪ್ರೇಮಿಗಳು ಉದಾಹರಣೆಯಾಗಿ ಉಲ್ಲೇಖಿಸಿರುವುದನ್ನು ತಿಳಿಸಿದ್ದಾರೆ.

ತಮಿಳುನಾಡು ರಾಜ್ಯದ ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಈ ಬೆಳವಣಿಗೆ ನಂತರ ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯದ ವ್ಯಾಪ್ತಿಯ ಅರಣ್ಯದೊಳಗೆ ದನಕರುಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಲು ಮತ್ತು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸಲು ಸಚಿವ ಖಂಡ್ರೆ ಸೂಚಿಸಿದ್ದಾರೆ.

More articles

Latest article