ಬೆಂಗಳೂರು: ಕರ್ನಾಟ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಇವರು ಸಂಯುಕ್ತ ಹೋರಾಟ ಕರ್ನಾಟಕ ಇದರ ಸಂಯೋಜಕರೂ ಹೌದು. ಜೆ.ಸಿ.ಬಯ್ಯಾರೆಡ್ಡಿ ಅವರು ಇಂದು ಮುಂಜಾನೆ 3 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರ ಪಾರ್ಥಿವ ಶರೀರವನ್ನು ಬೆಳಗ್ಗೆ 6 ಯಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಸಿ.ಪಿ.ಐ.(ಎಂ) ಪಕ್ಷದ ರಾಜ್ಯ ಕಛೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಡಾ. ಕೆ.ಪ್ರಕಾಶ್ ತಿಳಿಸಿದ್ದಾರೆ.
ಇವರು ಹಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಂಗಳವಾರ ತುಮಕೂರಿನಲ್ಲಿ ನಡೆದ ಸಿಪಿಎಂ ರಾಜ್ಯ ಸಮ್ಮೇಳನದಲ್ಲಿ ಅವರನ್ನು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕಿನ ಗಡಿಗವಾರಹಳ್ಳಿ ಗ್ರಾಮದ ಬಯ್ಯಾರೆಡ್ಡಿ ರಾಜ್ಯದಾದ್ಯಂತ ರೈತ, ಕಾರ್ಮಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು . ಚಿಕ್ಕಬಳ್ಳಾಪುರ ಮತ್ತು ಕೋಲಾರ ಮಾತ್ರವಲ್ಲದೆ ರಾಜ್ಯಾದ್ಯಂತ ನಡೆಯುವ ಅನೇಕ ಜನಪರ ಹೋರಾಟಗಳಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು.
1999ರ ಲೋಕಸಭಾ ಚುನಾವಣೆಯಲ್ಲಿ ಸಿಪಿಎಂ ಪಕ್ಷದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕರ್ನಾಟಕದ ಐಕ್ಯ ಹೋರಾಟಕ್ಕೆ ಬಲ ತುಂಬಿದ ಬಯ್ಯಾರೆಡ್ಡಿಯವರ ನಿಧನ ಕರ್ನಾಟಕದ ಚಳುವಳಿಗೆ ತುಂಲಾರದ ನಷ್ಟ. ಅವರು ಮತ್ತೆ ಹುಟ್ಟಿ ಬರಲಿ ಎಂದು ಆಶಿಸುತ್ತಾ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ ಹಾಗೂ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಅನೇಕ ಮುಖಂಡರು ಸಂತಾಪ ಸೂಚಿಸಿದ್ದಾರೆ.