ಬೆಂಗಳೂರು: ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
114 ವರ್ಷದ ಸಾಲು ಮರದ ತಿಮ್ಮಕ್ಕ ಶುಕ್ರವಾರ ನಿಧನಹೊಂದಿದ್ದರು.
ಅಂತ್ಯಕ್ರಿಯೆ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಪೊಲೀಸರು ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದರು. ಸರ್ಕಾರದ ಪರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ತಿಮ್ಮಕ್ಕ ಅವರಿಗೆ ಅಂತಿಮ ಗೌರವ ಸಲ್ಲಿಸಿದರು.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ತಿಮ್ಮಕ್ಕ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು.
ತಿಮ್ಮಕ್ಕ ಅವರಿಗೆ ಮಕ್ಕಳಿರಲಿಲ್ಲ. ಈ ಕೊರಗನ್ನು ನೀಗಿಸಿಕೊಳ್ಳಲು ಅವರು ಮಾಗಡಿ ರಸ್ತೆಯ ಇಕ್ಕೆಲದಲ್ಲಿಆಲದ ಸಸಿಗಳನ್ನು ನೆಟ್ಟು ಮಕ್ಕಳಂತೆ ಭಾವಿಸಿ ಪೋಷಿಸಿ ಬೆಳೆಸಿದ್ದರು. ಇದೇ ಕಾರಣಕ್ಕೆ ಅವರಿಗೆ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳು ಅರಸಿ ಬಂದಿದ್ದವು.

