ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹಿರಾತು ನೀಡಿತ್ತು.
ಈ ಜಾಹೀರಾತು ವಿರೋಧಿಸಿ ಬಿಜೆಪಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಮಧ್ಯಂತರ ತಡೆ ಆದೇಶ ನೀಡಿದೆ.
2023ರ ಮೇ 5 ರಂದು ಎಲ್ಲ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಭ್ರಷ್ಟಾಚಾರ ದರ ಪಟ್ಟಿ ಎಂಬ ಹೆಸರಿನ ಅಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಜಾಹೀರಾತು ನೀಡಿತ್ತು. ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರವು ಕಳೆದ ನಾಲ್ಕು ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಕೆಪಿಸಿಸಿ ಹಾಗೂ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.