ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ; ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್‌

Most read

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ  ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ಘಟಕ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಇಂದು ತಡೆ ನೀಡಿದೆ.

ಇದೇ ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೂ (ಕೆಪಿಸಿಸಿ) ಮಧ್ಯಂತರ ಪರಿಹಾರ ನೀಡಿದೆ.

ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಿಎಸ್ ಕೇಶವ ಪ್ರಸಾದ್ ಅವರು ಸಲ್ಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌ ಆರ್ ಕೃಷ್ಣ ಕುಮಾರ್ ಅವರಿದ್ದ ಏಕ ಸದಸ್ಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಮುಂದಿನ ಆದೇಶದವರೆಗೆ ಸದ್ಯದ ವಿಚಾರಣೆಗೆ ತಡೆ ನೀಡಿ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದರು.

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತುಗಳನ್ನು ನೀಡಿತ್ತು.  ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾದ ಮತ್ತು ಆನ್‌ಲೈನ್‌ನಲ್ಲಿ ಪ್ರಚಾರ ಮಾಡಲಾದ ಈ ಜಾಹೀರಾತುಗಳಿಂದ ಪಕ್ಷದ ಗೌರವಕ್ಕೆ ಹಾನಿಯುಂಟಾಗಿದೆ ಎಂದು ಬಿಜೆಪಿ ಆರೋಪಿಸಿ ಪ್ರಕರಣ ದಾಖಲಿಸಿತ್ತು.

ಈ ಜಾಹೀರಾತು ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅಂದಿನ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಕಾರಣರಾಗಿದ್ದಾರೆ. ರಾಹುಲ್ ಗಾಂಧಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಈ ಸುಳ್ಳು ಜಾಹೀರಾತನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ಮಾನಹಾನಿ ಮಾಡಿದ್ದಾರೆ. ಹೀಗಾಗಿ, ಕಾಂಗ್ರೆಸ್, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರಡಿ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ವಾದಿಸಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರ್ಷದ ಆರಂಭದಲ್ಲಿ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿತ್ತು.

More articles

Latest article