ಬೆಂಗಳೂರು: ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ಭೀಕರ ಸನ್ನಿವೇಶಗಳನ್ನು ಸೃಷ್ಟಿಸುತಿದೆ. ಸುಮಾರು 14 ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆಯೂ ರಜೆಯನ್ನು ಮುಂದುವರೆಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಂಗಳವಾರ ರಜೆ ನೀಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಪ್ರಭಾರ ಜಿಲ್ಲಾಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3ರ ಮಂಗಳವಾರವು ಸಹ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ. ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತುಪಡಿಸಿ ರಜೆ ಘೋಷಣೆ ಮಾಡಲಾಗಿದೆ. ರಾಮನಗರ ಜಿಲ್ಲೆಯಲ್ಲೂ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು, ನಾಳೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ನದಿ ತೀರ, ಸಮುದ್ರ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಡಿ.6 ರವರೆಗೆ ಮೀನುಗಾರಿಕೆ ನಡೆಸದಂತೆ ಕಟ್ಟಪ್ಪಣೆ ಮಾಡಲಾಗಿದೆ. ನಡೆಸದಂತೆ ಸೂಚನೆ. ಸಾರ್ವಜನಿಕರು, ಪ್ರವಾಸಿಗರು ಜಾಗ್ರತೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.