ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಖ್ಯಾತ ನಟ ದರ್ಶನ್ ತೂಗುದೀಪ ಅವರ ಆರೋಗ್ಯಕ್ಕೆ
ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್, ಬಳ್ಳಾರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಇಂದು ಹೈ ಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್
ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು. ವಿಚಾರಣೆ ಸಂದರ್ಭದಲ್ಲಿ ದರ್ಶನ್ ಪರವಾಗಿ ವಿಡಿಯೊ ಕಾನ್ಸರೆನ್ಸ್ ಮೂಲಕ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ತಮ್ಮ ಕಕ್ಷಿದಾರ ದರ್ಶನ್ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದಾರೆ. ಅವರಿಗೆ ಬಳ್ಳಾರಿಯ ವಿಜಯನಗರ ವೈದ್ಯಕೀಯ ಸಂಸ್ಥೆಯಲ್ಲಿ ಸೋಮವಾರ ಎಂಆರ್‌ಐ ಸ್ಕ್ಯಾನ್ ಮಾಡಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಆದ್ದರಿಂದ ವೈದ್ಯಕೀಯ ಕಾರಣಕ್ಕಾಗಿಯೂ ಜಾಮೀನು ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು. ಇವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ಬಳ್ಳಾರಿಯ ಕೇಂದ್ರ ಕಾರಾಗೃಹದ
ಅಧಿಕಾರಿಗೆ ನಿರ್ದೇಶನ ನೀಡಿದ್ದರು. ಹಾಗೆಯೇ ಜಾಮೀನು ಅರ್ಜಿಗೆ ಆಕ್ಷೇಪಣೆ
ಸಲ್ಲಿಸುವಂತೆಯೂ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿದರು. ನಂತರ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿದರು.