ಬೆಂಗಳೂರು, ನ.28 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಸದ್ಯಕ್ಕೆ ಆಸ್ಪತ್ರೆಗೆ ಸ್ಥಳಾಂತರಿಸದಿರಲು ಜೈಲಾಧಿಕಾರಿಗಳು ನಿರ್ಧರಿಸಿದ್ದಾರೆ. ಬೆನ್ನುನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಜೈಲಿನಲ್ಲೇ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ.
ದರ್ಶನ್ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲು ವಿಕ್ಟೋರಿಯಾ ಆಸ್ಪತ್ರೆಯ ಫಿಸಿಯೋಥೆರಪಿ ವೈದ್ಯರನ್ನು ಜೈಲಿಗೆ ಕರೆಸಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಅಗತ್ಯ ವೈದ್ಯಕೀಯ ಉಪಕರಣಗಳೊಂದಿಗೆ ವೈದ್ಯರು ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸುವ ಸಾಧ್ಯತೆಯಿದೆ. ವೈದ್ಯರ ಪರಿಶೀಲನೆ ಬಳಿಕ ಅಗತ್ಯ ಚಿಕಿತ್ಸೆ ನೀಡಲಾಗುತ್ತದೆ.
ದರ್ಶನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸುವಂತೆ 59ನೇ ಸಿಸಿಹೆಚ್ ನ್ಯಾಯಾಲಯ ನಿರ್ದೇಶನ ನೀಡಿತ್ತು. ಆದರೆ, ಸದ್ಯಕ್ಕೆ ಜೈಲಿನಲ್ಲೇ ಚಿಕಿತ್ಸೆ ಮುಂದುವರಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಈ ಸಂಬಂಧ ಸೋಮವಾರ ವಿಶೇಷ ಸಾರ್ವಜನಿಕ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

