ಕರ್ನಾಟಕ ಅಪಾರ್ಟ್‌ ಮೆಂಟ್ ವಿಧೇಯಕ-2025 ಕುರಿತು ಅಪಾರ್ಟ್‌ ಮೆಂಟ್ ಸಂಘಗಳ ಜತೆ ಡಿಸಿಎಂ ಡಿಕೆ ಶಿವಕುಮಾರ್‌ ಸಂವಾದ

Most read

ಬೆಂಗಳೂರು: ಕರ್ನಾಟಕ ಅಪಾರ್ಟ್‌ ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ- 2025 ಕುರಿತು ಅಪಾರ್ಟ್‌ ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳ ಜತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ಸಂವಾದ ನಡೆಸಿದರು.  

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮ ಸೇವೆ ಮಾಡಿದರೆ ನಮಗೆ ಮತ ಹಾಕುತ್ತೀರಿ ಎಂಬುದಷ್ಟೇ ನಮ್ಮ ಆಸೆಯಾಗಿರುತ್ತದೆ. ಅದನ್ನು ಬಿಟ್ಟು ನಿಮ್ಮಿಂದ ಬೇರೆ ಏನನ್ನೂ ಕೇಳುವುದಿಲ್ಲ. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಅಪಾರ್ಟ್ ಮೆಂಟ್ ನಿವಾಸಿಗಳಿಗೂ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡಿದ್ದೇವೆ ಎಂದು ಹೇಳಿದರು.

ನಾನು ಸತತವಾಗಿ 8 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ಕಳೆದ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಹೋಗಲಿಲ್ಲ. ವಿರೋಧ ಪಕ್ಷದ ನಾಯಕ ಅಶೋಕ್ ನನ್ನ ವಿರುದ್ಧ ಸ್ಪರ್ಧಿಸಿದ್ದರೂ ಜನ ನನಗೆ 1.23 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಅಂತರದ ಗೆಲುವು ಎಂದು ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಸ್ಮರಿಸಿಕೊಂಡರು.

ಯಾವನೇ ಆಗಿರಲಿ, ಸರ್ಕಾರಕ್ಕೆ ಎಚ್ಚರಿಕೆ ನೀಡಲು ಆಗುವುದಿಲ್ಲ ಎನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಕಿರಣ್ ಹೆಬ್ಬಾರ್ ಎಂಬಾತ ತಾನು ಅಂಪಾರ್ಟ್‌ ಮೆಂಟ್ ಮಾಲೀಕ ಎಂದು ಪತ್ರ ಬರೆದಿದ್ದು, ನಮಗೆ ಬೆದರಿಕೆ ಹಾಕಲು ಮುಂದಾಗಿದ್ದಾನೆ. ನಮ್ಮಲ್ಲಿ ಬಹುದೊಡ್ಡ ಮತದಾರರ ಸಮೂಹವಿದ್ದು, ಬೆಂಗಳೂರಿನ 1.30 ಕೋಟಿ ಮತದಾರರ ಮೇಲೆ ಪರಿಣಾಮ ಬೀರಬಲ್ಲೆವು. ಸರ್ಕಾರಗಳು ನಮ್ಮನ್ನು ನಿರ್ಲಕ್ಷಿಸಿದ್ದು, ಆಡಳಿತ ಪಕ್ಷ ನಮ್ಮ ಮನವಿ ನಿರ್ಲಕ್ಷಿಸಿದರೆ ಸದ್ಯದಲ್ಲೇ ಜಿಬಿಎ ಚುನಾವಣೆ ಬರುತ್ತಿದೆ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾನೆ ಎಂದರು. ಈ ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಹೆಬ್ಬಾರ್ ಎಂಬುವವನಿಗೆ ಹೆದರುತ್ತೇನೆಯೇ? ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ. ಯಾರೇ ಆಗಲಿ ಯಾರ ಜೊತೆ ಮಾತನಾಡುತ್ತಿದ್ದೇವೆ ಎಂಬುದರ ಬಗ್ಗೆ ಕನಿಷ್ಠ ಪರಿಜ್ಞಾನ ಇಟ್ಟುಕೊಳ್ಳಬೇಕು ಎಂದು ಹೇಳಿದರು.

ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ ಅಧ್ಯಕ್ಷ ಸತೀಶ್‌ ಮಲ್ಯ ಪ್ರತಿಕ್ರಿಯೆ ನೀಡಿ ಅಪಾರ್ಟ್‌ಮೆಂಟ್‌ ಮಾಲೀಕರ ಸಲಹೆಗಳನ್ನು ಉಪಮುಖ್ಯಮಂತ್ರಿ ಶಿವಕುಮಾರ್‌ ಅವರು ಆಲಿಸಿದ್ದಾರೆ. ನಮ್ಮ ಈ ಸಲಹೆಗಳನ್ನು ಶೀಘ್ರವಾಗಿ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ನಮ್ಮ ಮನವಿಯಾಗಿದೆ ಎಂದು ತಿಳಿಸಿದ್ದಾರೆ.

1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಕಾಯ್ದೆ ಬಹಳಷ್ಟು ಗೊಂದಲದಿಂದ ಕೂಡಿದೆ. ಇದನ್ನು ಸರಿಪಡಿಸಲು ಈಗಾಗಲೇ ಪ್ರಸ್ತಾಪಿಸಲಾಗಿರುವಂತಹ ಹೊಸ ಸಮಗ್ರ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯಲ್ಲಿ ಉತ್ತಮ ಅಂಶಗಳನ್ನು ಅಳವಡಿಸಲಾಗಿದೆ. ಈ ಕಾಯ್ದೆ ಅನುಷ್ಠಾನ ಇಂದಿನ ತುರ್ತು ಅಗತ್ಯವಾಗಿದೆ. ಸರಿಯಾದ ಕಾಯ್ದೆಯ ಬೆಂಬಲವಿಲ್ಲದೆ ಅಪಾರ್ಟ್‌ಮೆಂಟ್‌ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಈ ವಿಧೇಯಕವನ್ನು ಈ ಬಾರಿಯ ಅಧಿವೇಶನದಲ್ಲೇ ಮಂಡಿಸಿ ಜಾರಿಗೊಳಿಸುವುದು ಬಹಳ ಅಗತ್ಯವಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

ಸಂವಾದ ಕಾರ್ಯಕ್ರಮದಲ್ಲಿ BAF ಪ್ರಧಾನ ಕಾರ್ಯದರ್ಶಿ ಕೆ. ಅರುಣ್ ಕುಮಾರ್, ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಅಪಾರ್ಟ್‌ಮೆಂಟ್‌ ಮಾಲೀಕರು, ಫೆಡರೇಷನ್‌ ಪ್ರತಿನಿಧಿಗಳು ಭಾಗವಹಿಸಿ ಸಲಹೆ ನೀಡಿದರು.

More articles

Latest article