ಸುಲ್ತಾನ್ಪುರ: ವಕೀಲರ ಮುಷ್ಕರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಉತ್ತರಪ್ರದೇಶದ ಸುಲ್ತಾನ್ ಪುರದ ಸಂಸದರು ಶಾಸಕರ ನ್ಯಾಯಾಲಯ ಜನವರಿ 22ಕ್ಕೆ ಮುಂದೂಡಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶುಭಂ ವರ್ಮಾ ಅವರು ವಿಚಾರಣೆಯನ್ನು ಜನವರಿ 22ಕ್ಕೆ ನಿಗದಿಪಡಿಸಿದ್ದಾರೆ ಎಂದು ದೂರುದಾರ ವಿಜಯ್ ಮಿಶ್ರಾ ಪರ ವಕೀಲ ಸಂತೋಷ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
2018ರಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 2024ರ ಜುಲೈ 26ರಂದು, ಪ್ರಕರಣ ಸಂಬಂಧ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ದಾಖಲಿಸಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗಿದ್ದ ರಾಹುಲ್ ತಾವು ನಿರಪರಾಧಿ, ಆರೋಪಗಳು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದರು. ಬಳಿಕ ದೂರುದಾರರಿಗೆ ಸಾಕ್ಷ್ಯಗಳನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು. ರೂ. 25,000 ಮೌಲ್ಯದ ಎರಡು ಬಾಂಡ್ ಪಡೆದ ನಂತರ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರು ಮಾಡಲಾಗಿತ್ತು.