ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ 2026ರ ಪಶ್ಚಿಮ, ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಈಶಾನ್ಯ, ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಿದ್ಧತೆ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಚರ್ಚೆ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಸಚಿವರಾದ ಬೋಸರಾಜು, ರಹೀಂ ಖಾನ್, ದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಜಿ.ಕುಮಾರ್ ನಾಯಕ್, ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್, ಹನುಮಂತರಾಯಪ್ಪ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಮಾರ್ಗದರ್ಶನ ಮಾಡಿ ಶಿವಕುಮಾರ್ ಅವರು ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರು ಈಗಿನಿಂದಲೇ ಕೆಲಸ ಆರಂಭಿಸಬೇಕು. ಮುಂದಿನ ಎಂಟು ಹತ್ತು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತೇವೆ. ಎಲ್ಲ ಆಕಾಂಕ್ಷಿಗಳ ಜೊತೆ ನಾನು ವೈಯಕ್ತಿಕವಾಗಿ ಚರ್ಚೆ ನಡೆಸುತ್ತೇನೆ. ನಂತರ ಹೈ ಕಮಾಂಡ್‌ಗೆ ಶಿಫಾರಸುಗಳನ್ನು ಕಳಿಸುತ್ತೇನೆ ಎಂದು ತಿಳಿಸಿದರು.

