ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದರೂ ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕಗ್ಗಂಟಾಗಿ ಉಳಿದಿದೆ. ಬಿಕ್ಕಟ್ಟು ಬಗೆಹರಿಯದ ಹಿನ್ನಲೆಯಲ್ಲಿ ಇಂದು ನಿಗದಿಯಾಗಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. 26 ವರ್ಷಗಳ ನಂತರ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ನಿಚ್ಚಳ ಬಹುಮತ ಸಾಧಿಸಿದೆಯಾದರೂ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಬಗೆಹರಿದಿಲ್ಲ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿರುವುದು ಹೈಕಮಂಡ್ ಗೆ ತಲೆ ನೋವಾಗಿ ಪರಿಣಮಿಸಿದೆ. 14 ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಮುಖ್ಯಮಂತ್ರಿಗಳಿದ್ದು, ಯಾರೊಬ್ಬರೂ ಮಹಿಳೆಯರಿಲ್ಲ. ಹೀಗಾಗಿ, ದೆಹಲಿಯಲ್ಲಿ ಮಹಿಳೆಯೊಬ್ಬರನ್ನು ಮುಖ್ಯಮಂತ್ರಿ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮತ್ತೊಂದು ಕಡೆ ಹಿಂದುಳಿದ ವರ್ಗಕ್ಕೆ ಸೇರಿದ ಶಾಸಕರೊಬ್ಬರಿಗ ಅವಕಾಶ ನೀಡಬೇಕೆಂಬ ಬೇಡಿಕೆಯೂ ಹೆಚ್ಚಿದೆ.
ದೆಹಲಿ ವಿಧಾನಸಭೆ ನೂತನವಾಗಿ ಆಯ್ಕೆಯಾದ ಕೆಲವು ಬಿಜೆಪಿ ಶಾಸಕರು ಸಿಎಂ ಆಯ್ಕೆ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ ಅಮೆರಿಕ ಮತ್ತು ಫ್ರಾನ್ಸ್ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮರಳಿದ ಬಳಿಕವೇ ನೂತನ ಸಚಿವ ಸಂಪುಟದ ಕುರಿತು ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದರು. ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಗೆಲುವು ಸಾಧಿಸಿದ ಮಾಜಿ ಸಂಸದ ಪರ್ವೇಶ್ ವರ್ಮಾ ಅವರು ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.