ಕಲ್ಯಾಣ ಕರ್ನಾಟಕಕ್ಕೆ ಯೋಜನೆಗಳ ಮಹಾಪೂರ: ಸಿಎಂ ಸಿದ್ದರಾಮಯ್ಯ ಭರವಸೆ

Most read

ಕಲಬುರಗಿ: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಈ ಭಾಗದ ಎಸ್.ಎಸ್.ಎ.ಲ್.ಸಿ. ಮತ್ತು ಪಿ.ಯು.ಸಿ.ಗಳಲ್ಲಿ ಉತ್ತೀರ್ಣರಾಗುವವರ ಪ್ರಮಾಣ ತೀರಾ ಕಡಿಮೆ ಇದೆ. ಶಿಕ್ಷಣದ ಗುಣಮಟ್ಟ ಕಾಪಾಡಲು, ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಹೆಚ್ಚಳ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣ ಹೀಗೆ ಅನೇಕ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಳೆದ ಎರಡು ವರ್ಷದಿಂದ ‘ಅಕ್ಷರ ಆವಿಷ್ಕಾರ ಕಾರ್ಯಕ್ರಮ ರೂಪಿಸಿ ಇದೂವರೆಗೆ 6,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 350 ಕೆ.ಪಿ.ಎಸ್ ಶಾಲೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ನಿರ್ಮಿಸುವ ಗುರಿ ಹೊಂದಿದ್ದೇವೆ. ಇದಲ್ಲದೆ ಉನ್ನತ ಶಿಕ್ಷಣಕ್ಕೂ ಕಳೆದ ಎರಡು ವರ್ಷಗಳಲ್ಲಿ 250 ಕೋಟಿ ರೂ.ಗಳನ್ನು ಒದಗಿಸಿದ್ದೇವೆ.

ಹೋರಾಟದಿಂದ ತಕ್ಷಣಕ್ಕೆ ಸಿಕ್ಕ ಫಲ ನಮ್ಮ ಕಣ್ಣ ಮುಂದಿದೆ. 2013ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡಿದ ನಂತರ ಇದುವರೆಗೆ ವಿವಿಧ ಇಲಾಖೆಗಳಲ್ಲಿ 1,19,923 ಹುದ್ದೆಗಳನ್ನು ನೇರ ನೇಮಕಾತಿಗೆ ಗುರುತಿಸಿದ್ದು, 84,620 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇದೀಗ ಒಳ ಮೀಸಲಾತಿ ವಿಚಾರವನ್ನು ಬಗೆಹರಿಸಿರುವುದರಿಂದ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಉದ್ದೇಶಿಸಿದ್ದೇವೆ.

ಕೆ.ಕೆ.ಆರ್.ಡಿ.ಬಿ.ಗೆ ಪ್ರಸಕ್ತ 2025-26ನೇ ಸಾಲಿಗೆ 5,000 ಕೋಟಿ ರೂಪಾಯಿಗಳನ್ನು ಒದಗಿಸಿ, ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿದೆ. 371-ಜೆ ಸ್ಥಾನಮಾನ ದೊರೆತ ನಂತರ ತಾಂತ್ರಿಕ, ವೈದ್ಯಕೀಯ ಶಿಕ್ಷಣ ಹಾಗೂ ಇನ್ನಿತರ ಪದವಿ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಶೇ.70ರಷ್ಟು ಸ್ಥಾನಗಳನ್ನು ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಶೇ.8ರಷ್ಟು ಸ್ಥಾನಗಳನ್ನು ಈ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇದರ ಪರಿಣಾಮ 2014-15 ರಿಂದ 2024ರ ಶೈಕ್ಷಣಿಕ ಸಾಲಿನವರೆಗೆ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, 31,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ಇದಲ್ಲದೆ 12,000 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ದಂತ ವೈದ್ಯಕೀಯ, ಹೋಮಿಯೋಪತಿ, ಕೃಷಿ ಸಂಬಂಧಿತ, ಬಿ-ಫಾರ್ಮಸಿ/ಡಿ-ಫಾರ್ಮಸಿ ಕೋರ್ಸುಗಳು ಮುಂತಾದವುಗಳಿಗೆ ಮೀಸಲಾತಿ ಸೌಲಭ್ಯದಿಂದ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗಿದೆ.

 ಡಾ. ನಂಜುಂಡಪ್ಪ ಸಮಿತಿಯ ವರದಿಯ ಅನುಷ್ಠಾನದಿಂದಾಗಿ ಹಿಂದುಳಿದ ತಾಲ್ಲೂಕುಗಳಲ್ಲಿ ಆಗಿರುವ ಸುಧಾರಣೆಗಳು ಹಾಗೂ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರೊ. ಗೋವಿಂದ ರಾವ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸದರಿ ಸಮಿತಿಯು ವರದಿ ಸಲ್ಲಿಸಿದ ಕೂಡಲೆ ಸಾಧಕ ಬಾಧಕಗಳನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.

ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರ ನೇತೃತ್ವದ ಶರಣರ ಚಳುವಳಿಯು ಇದೇ ಪುಣ್ಯಭೂಮಿಯಲ್ಲಿ ನಡೆದಿತ್ತು ಎಂಬುದು ಇಡೀ ಜಗತ್ತು ಹೆಮ್ಮೆ ಪಡುವ ಸಂಗತಿಯಾಗಿದೆ. ಉದಾತ್ತ ಪರಂಪರೆಗೆ ನಾಂದಿ ಹಾಡಿದ್ದ ಅಸಂಖ್ಯಾತ ಅನುಭಾವಿಗಳು, ಅವಧೂತರು, ಆರೂಢರು, ಸೂಫಿಸಂತರ ಕರ್ಮಭೂಮಿ ಇದು ಎಂದು ಕಲ್ಯಾಣ ಕರ್ನಾಟಕವನ್ನು ಕೊಂಡಾಡಿದರು.

ನಮ್ಮ ಸರ್ಕಾರ ಇದುವರೆಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಕ್ತಿ ಯೋಜನೆಯಡಿ 77.6 ಕೋಟಿ ಟ್ರಿಪ್ಪುಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 2,100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 21.42 ಲಕ್ಷ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದು, ಇದಕ್ಕಾಗಿ 2,328 ಕೋಟಿ ರೂ ವಿನಿಯೋಗಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ 24.78 ಲಕ್ಷ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ತಲಾ 2,000 ರೂ.ಗಳಂತೆ ಒಟ್ಟು 9,650 ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಈ ಭಾಗದ ಫಲಾನುಭವಿಗಳಿಗೆ ಒಟ್ಟು 3,200 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲಾಗಿದೆ. ಯುವನಿಧಿ ಯೋಜನೆಯಡಿ 5.75 ಲಕ್ಷ ನಿರುದ್ಯೋಗಿ ಯುವಕ-ಯುವತಿಯರಿಗೆ ಒಟ್ಟು 172 ಕೋಟಿ ರೂ.ಗಳನ್ನು ನೀಡಲಾಗಿದೆ.

ಗುಲಬರ್ಗಾ ವಿ.ವಿ. ಆವರಣದಲ್ಲಿ 1,000 ಸಾಮರ್ಥ್ಯದ ವಸತಿ ನಿಲಯ ಸಂಕೀರ್ಣವನ್ನು 78 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬ್ಯಾಂಕ್ ಖಾತೆಗಳಲ್ಲಿ ಲಭ್ಯವಿರುವ ಬಡ್ಡಿ ಮೊತ್ತದಲ್ಲಿ ಪ್ರದೇಶದ 15 ಮಹಿಳಾ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಯನ್ನು 48 ಕೋಟಿ ರೂ. ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತಿದೆ.

  ಕಲಬುರಗಿ ಜಿಲ್ಲೆಯಲ್ಲಿ 515 ನೂತನ ಅಂಗನವಾಡಿ ಕಟ್ಟಡಗಳನ್ನು 118 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ 50:50 ಅನುಪಾತದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸಲಾಗುತ್ತಿದೆ.

ಈ ಭಾಗದ ಮಕ್ಕಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಕಲಬುರಗಿಯಲ್ಲಿ ನೈಸ್ ಅಕಾಡೆಮಿ ಸಂಸ್ಥೆ ಸ್ಥಾಪಿಸಿದ್ದೇವೆ.

ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಸ್ಥಾಪಿಸಲು 100 ಕೋಟಿ, ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆಗೆ 221 ಕೋಟಿ ರೂ. ಒದಗಿಸಲಾಗಿದೆ. ಕಲಬುರಗಿಯ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಸ್ಪತ್ರೆ ಕಟ್ಟಡ ಮತ್ತು ಉಪಕರಣಗಳಿಗಾಗಿ 287 ಕೋಟಿ ರೂ.ಗಳನ್ನು ಒದಗಿಸಿದ್ದೇವೆ.

ರಾಯಚೂರಿನಲ್ಲಿ ಏಮ್ಸ್ ಸಂಸ್ಥೆಯನ್ನು ಸ್ಥಾಪಿಸಲು ನಮ್ಮ ಸರ್ಕಾರವು ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲು ಸಿದ್ಧವಿದೆ. ಕೇಂದ್ರಕ್ಕೆ ಹಲವಾರು ಪತ್ರಗಳನ್ನು ಬರೆದಿದ್ದೇವೆ. ಸ್ವತಃ ಕೇಂದ್ರದ ಸಚಿವರುಗಳನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ. ಆದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತು ಸಹಕಾರವನ್ನು ತೋರಿಸುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರವು ಕೂಡಲೆ ಏಮ್ಸ್ ಸಂಸ್ಥೆ ಪ್ರಾರಂಭಿಸಲು ಕ್ರಮವಹಿಸಬೇಕೆಂದು ಒತ್ತಾಯಿಸುತ್ತೇನೆ.

ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಏಕೀಕರಣ ಅಗತ್ಯವಿರುವುದರಿಂದ ಕಲಬುರಗಿಯಲ್ಲಿ ಅಗ್ರಿ-ಟೆಕ್ ವೇಗವರ್ಧಕ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು ನಮ್ಮ ಸರ್ಕಾರವು 10 ಕೋಟಿ ರೂ. ಅನುದಾನವನ್ನು ಪ್ರಥಮ ಹಂತದಲ್ಲಿ ನೀಡಲು ತೀರ್ಮಾನಿಸಿದೆ.

More articles

Latest article