ನವದೆಹಲಿ: ಕರ್ನಾಟಕದ ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ದಶಕಗಳಿಂದ ದಾಖಲಾಗಿರುವ ಸುಮಾರು 74 ಮಹಿಳೆಯರ ನಾಪತ್ತೆ ಹಾಗೂ ಅನಾಥ ಶವಗಳ ಹೂಳುವಿಕೆಗೆ ಸಂಬಂಧಿಸಿದ ಪ್ರಕರಣಗಳನ್ನು ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 23ಕ್ಕೆ ಮುಂದೂಡಿದೆ.
ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ಕುಸುಮಾವತಿ ಅವರ ವಕೀಲರು ಹಾಜರಿರದ ಕಾರಣ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.
ಅತ್ಯಾಚಾರ ಎಸಗಿ ಕೊಲೆ ಮಾಡಲಾದ ಶವಗಳೂ ಸೇರಿದಂತೆ ನೂರಾರು ಶವಗಳನ್ನು ಹೂತುಹಾಕಿರುವುದಾಗಿ ದೂರು ಸಲ್ಲಿಸಿದ್ದ ಚಿನ್ನಯ್ಯ ನಂತರ ತಮ್ಮ ಹೇಳೀಕೆಯಿಂದ ಹಿಂದೆ ಸರಿದ್ದು, ಈ ಬಗ್ಗೆಯೂ ತನಿಖೆಯಾಗಬೇಕು ಎಂದು ಅರ್ಜಿಯಲ್ಲಿಕೋರಿದ್ದಾರೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳದ ನೇತ್ರಾವತಿ ನದಿದಡದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಗಳು ಕೇಳಿಬರುತ್ತಿವೆ. ಆದ್ದರಿಂದ ಈ ಎಲ್ಲಾ ಪ್ರಕರಣಗಳಲ್ಲೂ ಪ್ರತ್ಯೇಕ ಎಫ್ಐಆರ್ ದಾಖಲಾಗಿ ತನಿಖೆ ನಡೆಸಬೇಕು ಎಂದೂ ಕುಸುಮಾವತಿ ಅವರು ಅರ್ಜಿಯಲ್ಲಿ ಕೋರಿದ್ದಾರೆ.

