ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಕೃತ್ಯಗಳನ್ನು ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವ ತನಿಖೆ ತಾರ್ಕಿಕ ಅಂತ್ಯ ಕಾಣಲಿದೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.
ಅವರು ಪ್ರೆಸ್‌ಕ್ಲಬ್‌ನಲ್ಲಿ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ. ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡ ನಂತರ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಲಿದೆ. ದೂರುದಾರರನ್ನು ಕುರಿತೂ ತನಿಖೆ ನಡೆಯುತ್ತಿದೆ. ಒಂದು ವೇಳೆ ಯಾರಾದರೂ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರೆ ತನಿಖೆಯಿಂದ ಸತ್ಯ ಹೊರಬರಲಿದೆ ಎಂದು ತಿಳಿಸಿದರು.
ಆರೋಪ ಕೇಳಿ ಬಂದಾಗ ತನಿಖೆ ನಡೆಸಲು ಎಸ್‌ಐಟಿ ರಚಿಸಿದಾಗ ಧರ್ಮಸ್ಥಳದ ಧರ್ಮಾಧಿಕಾರಿಗಳ ಮತ್ತು ಬಿಜೆಪಿ ಮುಖಂಡರೂ ಸ್ವಾಗತಿಸಿದ್ದರು. ಇದೀಗ ತನಿಖೆಗೆ ಧರ್ಮ ಮತ್ತು ರಾಜಕೀಯದ ಲೇಪನ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಪೊನ್ನಣ್ಣ ಆರೋಪಿಸಿದರು.
ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋಗಲಿ ಎಂದು ಕೆಲವರು ಹೇಳುತ್ತಾರೆ. ಆದರೆ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ನೆರವು, ಜಿಎಸ್ ಟಿ ಕುರಿತು ಬಾಯಿ ಬಿಡುವುದೇ ಇಲ್ಲ ಎಂದು ವ್ಯಂಗ್ಯವಾಡಿದರು. ಮೈಸೂರು ಮುಡಾ ಹಗರಣ, ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಬಿಂಬಿಸಲು ಇ.ಡಿ, ಸಿಬಿಐ ಸಂಸ್ಥೆಗಳನ್ನು ಅಸ್ತ್ರಗಳನ್ನು ಬಳಸಲಾಗಿತ್ತು. ಆದರೆ ಯಾವುದೇ ತನಿಖೆಯಲ್ಲೂ ಭ್ರಷ್ಟಾಚಾರದ ಕುರುಹು ಕಂಡು ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪೊನ್ನಣ್ಣ ಉತ್ತರಿಸಿದರು.