ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ತನಿಖೆಗೆ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಅವರು ಬೆಳ್ತಂಗಡಿಯಲ್ಲಿರುವ ಎಸ್ ಐಟಿ ಕಚೇರಿಯಲ್ಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಇದುವರೆಗೂ ನಡೆದಿರುವ ಪ್ರಗತಿ, ಅವಶೇಷಗಳ ಪತ್ತೆ ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಚರ್ಚಿಸಿದ್ದಾರೆ.
ಎಸ್ ಐಟಿ ಅಧಿಕಾರಿಗಳು ವಿವಿಧ ಮೂಲಗಳಿಂದ ಕಲೆ ಹಾಕಿರುವ ಮಾಹಿತಿ, ಧರ್ಮಸ್ಥಳ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಆಂಬುಲೆನ್ಸ್ ಚಾಲಕರು ಹಾಗೂ ಇತರರು ನೀಡಿರುವ ಮಾಹಿತಿ ಆಧಾರದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

 
                                    