ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ ಐ ಟಿ) ಮುಖ್ಯಸ್ಥರಾಗಿರುವ ಪ್ರಣಬ್ ಮೊಹಾಂತಿ ಅವರು ಒಂದು ವೇಳೆ ಕೇಂದ್ರ ಸರ್ಕಾರದ ಸೇವೆಗೆ ತೆರಳಿದರೆ ಅವರ ಜಾಗಕ್ಕೆ ಮತ್ತೊಬ್ಬರನ್ನು ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾನೂನು ಪ್ರಕಾರವೇ ಸರ್ಕಾರ ನಡೆದುಕೊಳ್ಳಲಿದೆ ಎಂದರು.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕರಾಗಿರುವ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ 35 ಐಪಿಎಸ್ ಅಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸಿಬಿಐ, ಎನ್ ಎಐ ಸೇರಿ ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳ ಮಹಾನಿರ್ದೇಶಕ ಹುದ್ದೆಗೆ ಈ ಪಟ್ಟಿಯಲ್ಲಿರುವ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಬಗ್ಗೆ ತನಿಖೆ ಮುಂದುವರೆದಿದೆ. ತನಿಖೆ ನಡೆಯುವಾಗ ನಾವು ಯಾರೂ ಮಾತನಾಡಬಾರದೆಂದು ನಿರ್ಧರಿಸಿದ್ದೇವೆ. ತನಿಖೆಯ ಬಳಿಕ ಎಲ್ಲ ಮಾಹಿತಿ ಸಿಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವವರ ವಿರುದ್ಧ ನಟಿ ರಮ್ಯಾ ನೀಡಿರುವ ದೂರಿನ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್ ದೂರಿನ ಬಗ್ಗೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಅಭಿಪ್ರಾಯ ವ್ಯಕ್ತಪಡಿಸಲು ಎಲ್ಲರೂ ಸ್ವತಂತ್ರರಿದ್ದಾರೆ. ಆದರೆ, ತೇಜೋವಧೆ ಮಾಡುವ ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಬಾರದು ಎಂದರು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡ ಮಂಗಳೂರು ನಗರದಲ್ಲಿ ಕಚೇರಿ ಪ್ರಾರಂಭಿಸಿದೆ. ಈ ಪ್ರಕರಣದ ಬಗ್ಗೆ ಎಸ್‌ಐಟಿಯನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಸಹಾಯವಾಣಿಯನ್ನೂ ಆರಂಭಿಸಲಾಗಿದೆ.
ಎಸ್ ಐ ಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ. ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ದೂರು ನೀಡಬಹುದಾಗಿದೆ. ದೂರವಾಣಿ ಸಂಖ್ಯೆ: 0824–2005301; ಮೊಬೈಲ್/ವಾಟ್ಸ್ಆ್ಯಪ್ ಸಂಖ್ಯೆ: 8277986369; ಇ–ಮೇಲ್: [email protected]