ಪೊಲೀಸರು  ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಸೇವೆಯಿಂದಲೇ ವಜಾ: ಗೃಹ ಸಚಿವ ಪರಮೇಶ್ವರ್‌

Most read

ಬೆಂಗಳೂರು: ಪೊಲೀಸರೇ ಕಳ್ಳತನ ಮತ್ತು ದರೋಡೆಯಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಅಂತಹ ಅಧಿಕಾರಿಗಳನ್ನು ಕೇವಲ ಅಮಾನತ ಮಾಡದೆ, ಸೇವೆಯಿಂದಲೇ ವಜಾ ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ತಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಟಿ.ಎ. ಶರವಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕಳ್ಳತನ ಮತ್ತು ದರೋಡೆಯಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಅತ್ಯಂತ ಗಂಭೀರ ವಿಚಾರವಾಗಿದೆ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದಲೇ ವಜಾ ಮಾಡುವ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಭರವಸೆ ನೀಡಿದ್ದಾರೆ.

ಶರವಣ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ರಕ್ಷಕರೇ ಭಕ್ಷಕರಾಗುತ್ತಿದ್ದಾರೆ. ಸಾರ್ವಜನಿಕರಿಗೆ ಪೊಲೀಸರ ಮೇಲಿರುವ ವಿಶ್ವಾಸ ಕುಸಿಯುತ್ತಿದೆ. ಕೇವಲ ಅಮಾನತು ಮಾಡಿ ಮತ್ತೆ ಅವರನ್ನು ಕೆಲಸಕ್ಕೆ ಸೇರಿಸಿಕೊಳ್ಳುವ ಪದ್ಧತಿ ಬೇಡ. ಅಂತಹ ಅಧಿಕಾರಿಗಳನ್ನು ಸೇವೆಯಿಂದಲೇ ಶಾಶ್ವತವಾಗಿ ವಜಾ ಮಾಡುವಂತಹ ಕಠಿಣ ಕಾನೂನು ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

ಇವರ ವಾದವನ್ನು ಪುಷ್ಟೀಕರಿಸಿದ ಸಚಿವರು, “ಬಹಳಷ್ಟು ಪ್ರಕರಣಗಳಲ್ಲಿ ಕೇವಲ ಅಮಾನತು ಮಾಡುವುದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಆದ್ದರಿಂದ, ಕೃತ್ಯದಲ್ಲಿ ಭಾಗಿಯಾಗಿರುವುದು ಸಾಬೀತಾದ ತಕ್ಷಣ ಅಂತಹವರನ್ನು ಇಲಾಖೆಯಿಂದಲೇ ವಜಾ ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಭ್ರಷ್ಟ ಅಧಿಕಾರಿಗಳಿಗೆ ಇಲಾಖೆಯಲ್ಲಿ ಸ್ಥಾನವಿಲ್ಲ” ಎಂದು ಎಚ್ಚರಿಸಿದರು.

88 ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್:

ಕಳೆದ ಮೂರು ವರ್ಷಗಳಲ್ಲಿ ಪೊಲೀಸ್ ಅಧಿಕಾರಿಗಳೇ ಭಾಗಿಯಾದ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ ಸಚಿವರು, ಈಗಾಗಲೇ 88 ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಎಫ್‌ಐಆರ್ ಹಾಕಲಾಗಿದೆ. ಈ ಪೈಕಿ ಕೆಲವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ವಿವರಿಸಿದರು. ಇಲಾಖೆಯಲ್ಲಿ 1 ಲಕ್ಷಕ್ಕೂ ಅಧಿಕ ಪ್ರಾಮಾಣಿಕ ಸಿಬ್ಬಂದಿಗಳಿದ್ದಾರೆ, ಆದರೆ ಕೆಲವು ಅಧಿಕಾರಿಗಳ ಇಂತಹ ನಡವಳಿಕೆಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಎಂದು ಅವರು ವಿಷಾದಿಸಿದರು.

More articles

Latest article