ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಹೇಯ ಕೃತ್ಯದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳು 24 ಗಂಟೆ ಕಾಲ OPD ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ಇಂದು ಭಾರಿ ಸಮಸ್ಯೆ ಎದುರಾಗುತ್ತಿರುವುದು ವರದಿಯಾಗಿದೆ.
ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಕರ್ನಾಟಕ ಸರ್ಕಾರಿ ವೈದ್ಯರಿಗೆ ಇಂದಿನ ರಜೆ ಮಂಜೂರು ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಆದೇಶಿಸಿದ್ದರು, ರಾಜ್ಯದಲ್ಲಿ ಹಲವು ತೊಂದರೆಗಳು ವರದಿಯಾಗಿವೆ.
ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗಿದೆ. ಇದರಿಂದ ರೋಗಿಗಳು ಒಪಿಡಿ ಬದಲು ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಮುಗಿಬಿದ್ದಿದ್ದು ರೋಗಿಗಳನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡ್ತಿದ್ದಾರೆ.
ಕೋಲಾರದಲ್ಲಿ ಸರ್ಕಾರಿ ಮತ್ತು ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ರ್ಯಾಲಿಯಲ್ಲಿ ನೂರಾರು ಸಂಖ್ಯೆಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಭಾಗಿಯಾಗಿದ್ದು ವೈದ್ಯರಿಲ್ಲದೇ ಕೋಲಾರದಲ್ಲೂ ರೋಗಿಗಳು ಪರದಾಡುತ್ತಿದ್ದಾರೆ.
ಹಾಸನದಲ್ಲೂ ಶನಿವಾರ ಬೆಳಗ್ಗೆ 6ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಸೇವೆ ಸ್ಥಗಿತವಾಗಿರಲಿದೆ. ಸದ್ಯ ಹಾಸನದ ಆಸ್ಪತ್ರೆಗಳಲ್ಲಿ ರೋಗಿಗಳು ಪರದಾಡುತ್ತಿದ್ದಾರೆ.
ಕೆಸಿ ಜನರಲ್ ಆಸ್ಪತ್ರೆಯ ವೈದ್ಯರು ಪ್ರತಿಭಟನೆಯಲ್ಲಿ ತೊಡಗಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಸಿಗದೇ ಗರ್ಭಿಣಿ ಪರದಾಡಿದಂತಹ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಒಪಿಡಿ ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತಿದೆ. ಬಾಗಲಕೋಟೆಯಲ್ಲಿ ಜಿಲ್ಲಾಸ್ಪತ್ರೆ ಒಪಿಡಿ ಸಕ್ಷನ್ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ.